ADVERTISEMENT

ಎಚ್.ಡಿ.ರೇವಣ್ಣ ಅರ್ಜಿ: ದೂರುದಾರರಿಗೆ ತುರ್ತು ನೋಟಿಸ್

​ಪ್ರಜಾವಾಣಿ ವಾರ್ತೆ
Published 7 ಜೂನ್ 2024, 16:21 IST
Last Updated 7 ಜೂನ್ 2024, 16:21 IST
ಎಚ್.ಡಿ.ರೇವಣ್ಣ
ಎಚ್.ಡಿ.ರೇವಣ್ಣ   

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಶಾಸಕ ಎಚ್‌.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರಕರಣದ ದೂರುದಾರರಿಗೆ ತುರ್ತು ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಎಚ್‌.ಡಿ. ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯನ್ನು, "ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ"ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಲಾಗಿದೆ.

ADVERTISEMENT

ಮತ್ತೊಂದು ಪ್ರಕರಣ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲೂ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇದೇ ನ್ಯಾಯಪೀಠ ಜೂನ್ 14ಕ್ಕೆ ಮುಂದೂಡಿದೆ.

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಎಚ್‌.ಡಿ. ರೇವಣ್ಣ ಪರ ವಕೀಲರು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಇದನ್ನು ಮನ್ನಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.