ADVERTISEMENT

ಸರ್ಕಾರದ ವೈಫಲ್ಯ: ವಿಶೇಷ ಅಧಿವೇಶನಕ್ಕೆ ಕುಮಾರಸ್ವಾಮಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 20:53 IST
Last Updated 25 ಜೂನ್ 2021, 20:53 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ಕೋವಿಡ್‌ ನಿಯಂತ್ರಣದಲ್ಲಿನ ವೈಫಲ್ಯ, ಸರ್ಕಾರದ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಮತ್ತು ಕನ್ನಡ, ಕನ್ನಡಿಗರು, ಕರ್ನಾಟಕಕ್ಕೆ ಆಗುತ್ತಿರುವ ಹಿನ್ನಡೆಗಳ ಕುರಿತು ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

‘ಕೋವಿಡ್‌ ಸಂಕಷ್ಟದಲ್ಲಿ ರಾಜ್ಯ ಸರ್ಕಾರ ಜನರಿಗೆ ಸರಿಯಾದ ಆರ್ಥಿಕ ನೆರವಿನ ಪ್ಯಾಕೇಜ್‌ ನೀಡಿಲ್ಲ. ಪರಿಹಾರ ವಿತರಣೆಯಲ್ಲೂ ತಾರತಮ್ಯ, ಜಿಪುಣತನ ಪ್ರದರ್ಶಿಸಿದೆ. ಈಗ ಕೋವಿಡ್‌ ಮೂರನೇ ಅಲೆ ಬರುತ್ತಿದೆ. ಈ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು’ ಎಂದು ಆಗ್ರಹಿಸಿದ್ದಾರೆ.

ಜಲ ಸಂಪನ್ಮೂಲ ಇಲಾಖೆಯಲ್ಲಿ ₹ 20,000 ಕೋಟಿ ಮೊತ್ತದ ಕಾಮಗಾರಿಗಳ ಟೆಂಡರ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಡಳಿತ ಪಕ್ಷದ ಶಾಸಕರೊಬ್ಬರು ಆರೋಪಿಸಿದ್ದಾರೆ. ಶೇಕಡ 10ರಷ್ಟು ಲಂಚ ಪಡೆದ ಆರೋಪ ಮಾಡಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಸಚಿವರಿಗಾಗಿ ಪ್ರತಿ ಜಿಲ್ಲೆಯಿಂದ ಹಣ ಸಂಗ್ರಹಿಸುತ್ತಿರುವ ಕುರಿತ ದೂರವಾಣಿ ಕರೆಯ ರೆಕಾರ್ಡಿಂಗ್‌ ಬಹಿರಂಗವಾಗಿದೆ. ಈ ಬಗ್ಗೆಯೂ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ, ಕನ್ನಡಿಗರು ಮತ್ತು ಕರ್ನಾಟಕವನ್ನು ಕಡೆಗಣಿಸಲಾಗುತ್ತಿದೆ. ಭಾಷಾ ಕಲಿಕೆ, ಉದ್ಯೋಗ, ಶಿಕ್ಷಣ, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ಕುರಿತು ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಯಬೇಕು ಎಂದು ಕುಮಾರಸ್ವಾಮಿ ಬೇಡಿಕೆ ಇಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.