
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರು ರಹಸ್ಯವಾಗಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್‌ಎಂಡ್ ಹೋಟೆಲ್‌ನಲ್ಲಿ ಶನಿವಾರ ಬೆಳಿಗ್ಗೆ ಕುಮಾರಸ್ವಾಮಿ ಅವರನ್ನು ಪರಮೇಶ್ವರ ಭೇಟಿಯಾಗಿದ್ದರು. ಅರ್ಧ ಗಂಟೆಗೂ ಹೆಚ್ಚು ಸಮಯ ಉಭಯ ನಾಯಕರು ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಗಮನ ಸೆಳೆದಿದೆ. ಯಾವ ವಿಷಯದ ಕುರಿತು ಚರ್ಚೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿಲ್ಲ.
ಆದರೆ, ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರುವ ಹೊತ್ತಿನಲ್ಲೇ ಕುಮಾರಸ್ವಾಮಿ ಅವರನ್ನು ಪರಮೇಶ್ವರ ಅವರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಪರಮೇಶ್ವರ ಅವರು ತಮ್ಮ ಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅಥವಾ ಕ್ಷೇತ್ರಕ್ಕೆ ಸಂಬಂಧಿಸಿದ ಇತರೆ ವಿಚಾರವಾಗಿ ಚರ್ಚಿಸಲು ಕುಮಾರಸ್ವಾಮಿ ಅವರನ್ನು ಭೇಟಿ ಆಗಿರಬಹುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.