ADVERTISEMENT

ಶಿವಕುಮಾರ್ ರಾಜೀನಾಮೆ ಕೊಡಲಿ: ಎಚ್‌ಡಿಕೆ

ಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಪೆನ್‌ ಡ್ರೈವ್‌ ಸಂಚಿನಲ್ಲಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ: ಆರೋಪ

​ಪ್ರಜಾವಾಣಿ ವಾರ್ತೆ
Published 21 ಮೇ 2024, 16:02 IST
Last Updated 21 ಮೇ 2024, 16:02 IST
ಡಿಕೆಶಿ , ಎಚ್‌ಡಿಕೆ
ಡಿಕೆಶಿ , ಎಚ್‌ಡಿಕೆ   

ಬೆಂಗಳೂರು: ದೇವೇಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಉದ್ದೇಶ ಹೊಂದಿದ್ದ ಪೆನ್‌ಡ್ರೈವ್ ಸಂಚಿನಲ್ಲಿ ಭಾಗಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಸುದ್ದಿಗಾರರ ಜತೆಗೆ ಮಂಗಳವಾರ ಮಾತನಾಡಿದ ಅವರು, ‘ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ  ವಿಡಿಯೊಗಳನ್ನು ಮೊದಲು ತಂದುಕೊಟ್ಟಿದ್ದೇ ಶಿವಕುಮಾರ್ ಅವರಿಗೆ. ಆ ವೇಳೆ, ಹಾಸನದ ಕಾಂಗ್ರೆಸ್ ಅಭ್ಯರ್ಥಿಯೂ ಇದ್ದರು. ಈ ಪ್ರಕರಣದಲ್ಲಿ ಶಿವಕುಮಾರ್ ಪಾತ್ರ ಇರುವುದಕ್ಕೆ ಆಡಿಯೊ ಸಂಭಾಷಣೆಯ ಸಾಕ್ಷ್ಯವೂ ಇದೆ. ಅವರು ರಾಜೀನಾಮೆ ಕೊಡದಿದ್ದರೆ, ಅವರನ್ನು ಮುಖ್ಯಮಂತ್ರಿಯವರು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

‘ಪೆನ್ ಡ್ರೈವ್ ಸೃಷ್ಟಿ ಮಾಡಿ, ಅದನ್ನೆಲ್ಲಾ ಹೊರಗೆ ತಂದು ಮಹಿಳೆಯರ ಪಾಲಿಗೆ ಕಂಟಕರಾದವರೇ ಇವತ್ತು ನರೇಂದ್ರ ಮೋದಿ, ಅಮಿತ್ ಶಾ ಅವರನ್ನು, ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಆಡಿಯೊ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ADVERTISEMENT

‘ಪೆನ್ ಡ್ರೈವ್ ಪ‍್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕ್ಷ್ಯ ಇದೆಯಾ ಎಂದು ಕೇಳಿದ್ದಾರೆ. ಮಾಧ್ಯಮಗಳಲ್ಲಿ ಬಿಡುಗಡೆ ಆಗಿರುವ ಶಿವರಾಮೇಗೌಡ, ದೇವರಾಜೇಗೌಡ, ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆಗಿಂತ ಬೇರೆ ಸಾಕ್ಷ್ಯ ಬೇಕಾ’ ಎಂದು ಅವರು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.