ADVERTISEMENT

ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ: ಆರೋಗ್ಯ ಇಲಾಖೆ ಸುತ್ತೋಲೆ

ಜಿಲ್ಲಾಡಳಿತಗಳಿಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 10 ಜೂನ್ 2022, 20:10 IST
Last Updated 10 ಜೂನ್ 2022, 20:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲು ಮಾರ್ಷಲ್‌ಗಳು ಅಥವಾ ಪೊಲೀಸ್‌ ಸಿಬ್ಬಂದಿ ನೆರವು ಪಡೆಯುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಿ ಆರೋಗ್ಯ ಇಲಾಖೆ ಶುಕ್ರವಾರ ಸುತ್ತೋಲೆ ಹೊರಡಿಸಿದೆ.

ಶಾಪಿಂಗ್‌ ಮಾಲ್‌ಗಳು, ರೆಸ್ಟೊರೆಂಟ್‌ಗಳು, ಪಬ್‌ಗಳು, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್‌ ಧರಿಸಿದ್ದರೆ ಮಾತ್ರವೇ ಪ್ರವೇಶ ಕಲ್ಪಿಸುವುದು ಆಯಾ ಸಂಸ್ಥೆಯ ಮಾಲೀಕರು, ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್‌ ನಿರ್ದೇಶನ ನೀಡಿದ್ದಾರೆ.

ADVERTISEMENT

ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್‌ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ನಾಗರಿಕರು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ ಎಂದು ಸೂಚಿಸಿದ್ದಾರೆ.

ವಿಷಮ ಶೀತ ಜ್ವರ (ಐಎಲ್‌ಐ) ಮತ್ತು ತೀವ್ರ ಉಸಿರಾಟದ ತೊಂದರೆ (ಎಸ್‌ಎಆರ್‌ಐ) ಲಕ್ಷಣಗಳನ್ನು ಹೊಂದಿದವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಆದ್ಯತೆಯೇ ಮೇರೆಗೆ ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಫಲಿತಾಂಶ ಲಭ್ಯವಾಗುವವರೆಗೆ ಮನೆಯಲ್ಲಿ ಪ್ರತ್ಯೇಕವಾಗಿರಬೇಕು. ಮುಂಜಾಗ್ರತಾ ಕ್ರಮವಾಗಿ ಎಲ್ಲ ಅರ್ಹರು ಕೋವಿಡ್‌ 19 ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ಜೂನ್‌ 6ರಂದು ಕೋವಿಡ್‌–19 ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೈಗೊಂಡ ನಿರ್ಧಾರ ಹಾಗೂ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಜೂನ್‌ 9ರಂದು ಬರೆದಿರುವ ಪತ್ರದ ಅನ್ವಯ ಆರೋಗ್ಯ ಇಲಾಖೆ ಈ ಕ್ರಮಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.