ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಔಷಧ ಸರಬರಾಜು, ವೈದ್ಯರು, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾ.11ರಿಂದ ಮುಷ್ಕರ ಆರಂಭಿಸಲಿದೆ.
ಈಗಾಗಲೇ ಹಲವು ವರ್ಷಗಳಿಂದ ನಮ್ಮ ಬೇಡಿಕೆ ಮನವಿ ಸಲ್ಲಿಸದರೂ ಪ್ರಯೋಜನವಾಗಿಲ್ಲ. ಈ ಕಾರಣದಿಂದ ಮುಷ್ಕರ ಅನಿವಾರ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಬೇಡಿಕೆ ಈಡೇರಿಸಲು ಗಮನ ಹರಿಸಬೇಕು ಎಂದು ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ್ ಮೇಟಿ, ನೌಕರರ ಕೇಂದ್ರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮಾ.11ರಿಂದ 15ರ ವರೆಗೆ ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸುತ್ತೇವೆ. ಈ ವೇಳೆ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುತ್ತೇವೆ. ಆನಂತರವೂ ಸರ್ಕಾರದ ನಿಲುವಿನಲ್ಲಿ ಬದಲಾವಣೆ ಕಾಣದೇ ಇದ್ದರೆ ಮಾ.16ರಿಂದ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸುತ್ತೇವೆ ಎಂದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ‘ಆರೋಗ್ಯ ಇಲಾಖೆ ಬೇಡಿಕೆ ನ್ಯಾಯಯುತವಾಗಿವೆ. ಇದನ್ನು ಈಡೇರಿಸುವುದು ಕಷ್ಟವಲ್ಲ. ಪ್ರಧಾನ ಕಾರ್ಯದರ್ಶಿಗಳು ಗಮನ ಹರಿಸಿ ಸರ್ಕಾರದ ಹಂತದಲ್ಲಿ ಸರಿಪಡಿಸಬೇಕು ಮುಷ್ಕರಕ್ಕೆ ಸಂಘದ ಸಂಪೂರ್ಣ ಬೆಂಬಲವಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.