ADVERTISEMENT

ಆರೋಗ್ಯ ಸಚಿವ ಸುಧಾಕರ್ ಕೂಡಲೇ ರಾಜೀನಾಮೆ ನೀಡಬೇಕು: ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 3 ಮೇ 2021, 11:37 IST
Last Updated 3 ಮೇ 2021, 11:37 IST
ಶಾಸಕಿ ಲಕ್ಷ್ಮಿ ಹೆಬ್ಬಾಳಕರ
ಶಾಸಕಿ ಲಕ್ಷ್ಮಿ ಹೆಬ್ಬಾಳಕರ   

ಬೆಳಗಾವಿ: ಚಾಮರಾಜನಗರದಲ್ಲಿ 24 ಜನರನ್ನು ಬಲಿ ತೆಗೆದುಕೊಂಡಿರುವ ಆಮ್ಲಜನಕ ದುರಂತದ ಹೊಣೆ ಹೊತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರರೂ ಆಗಿರುವ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ಆರೋಗ್ಯ ಸಚಿವ ಸುಧಾಕರ್ ಅವರೇ ಜನ ಸಾಯುತ್ತಿದ್ದರೂ ಕಮಿಷನ್ ಲೆಕ್ಕ ಹಾಕುವುದರಲ್ಲಿ ಮುಳುಗಿದ್ದೀರಾ? ಹೆಣದ ಮೇಲೆ ಹಣ ಮಾಡಿ ಯಾವ ಸಾಮ್ರಾಜ್ಯ ಕಟ್ಟಲು ಹೊರಟಿದ್ದೀರಾ ಸ್ವಾಮಿ?' ಎಂದು ಕೇಳಿದ್ದಾರೆ.

'ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಪ್ರತಿನಿತ್ಯ 70 ಟನ್ ಆಮ್ಲಜನಕ ಬೇಡಿಕೆ ಇದೆ. ಆದರೆ, ಕೇವಲ 20 ಟನ್ ಪೂರೈಕೆ ಮಾಡಲಾಗುತ್ತಿದೆ. ಈ ಲೋಪಗಳಿದ್ದರೂ ಆರೋಗ್ಯ ಮಂತ್ರಿ ಗಮನ ಹರಿಸದೆ ಸುಳ್ಳು ಹೇಳುತ್ತಲೇ 24 ಸಾವುಗಳಿಗೆ ಕಾರಣರಾಗಿದ್ದಾರೆ' ಎಂದು ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

'ರಾಜ್ಯದಲ್ಲಿ ಜನ ಸೋಂಕಿನಿಂದ ಸಾಯುತ್ತಿರುವುದಕ್ಕಿಂತ ಹೆಚ್ಚಾಗಿ ಸರ್ಕಾರ ಬೇಜವಾಬ್ದಾರಿಯಿಂದ ಉದ್ಭವಿಸಿರುವ ಆಮ್ಲಜನಕ, ಐಸಿಯು ಹಾಸಿಗೆ, ಔಷಧಗಳ ಪೂರೈಕೆ ಕೊರತೆಯಿಂದ ಸಾಯುತ್ತಿದ್ದಾರೆ. ಈ ಸಾವಿಗೆಲ್ಲ ಅಸಮರ್ಥ ಸರ್ಕಾರ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರೇ ಹೊಣೆ. ಇಷ್ಟೆಲ್ಲ ವೈಫಲ್ಯವಿದ್ದರೂ ಸಚಿವರ ತಲೆದಂಡಕ್ಕೆ ಮೀನಾಮೇಷವೇಕೆ ಎಂದು ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.

'ಕಳೆದ ವರ್ಷ ಬೆಂಗಳೂರಿನಲ್ಲಿ ಕೊರೊನಾ ನಿರ್ವಹಣೆ ಉಸ್ತುವಾರಿ ವಹಿಸಿಕೊಳ್ಳಲು ಪೈಪೋಟಿ ನಡೆಸಿದ್ದ ಹಲವು ಮಂತ್ರಿಗಳು ಈ ಬಾರಿ ಜನರ ಜೀವ ಉಳಿಸಲು ಆಮ್ಲಜನಕ ಪೂರೈಸಲು ಯಾಕೆ ಉತ್ಸುಕರಾಗಿಲ್ಲ? ಆರೋಗ್ಯ ಸಚಿವ ಸುಧಾಕರ್ ಅವರೇ ನಿಮ್ಮ ಕೈಯಲ್ಲಿ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಿ. ಜನರ ಸಾವಿನಲ್ಲಿ ಸುಳ್ಳು ಲೆಕ್ಕ ಕೊಟ್ಟು ನಿಮ್ಮ ಹುಳುಕು ಮುಚ್ಚಿಕೊಳ್ಳುವ ಬಂಡ ಬಾಳು ಬಾಳಬೇಕಾ? ನಿಮಗೆ ಕಿಂಚಿತ್ತಾದರೂ ಮನುಷ್ಯತ್ವ ಇದ್ದರೆ ನೀವು ಕೂಡಲೇ ರಾಜೀನಾಮೆ ಕೊಡಿ' ಎಂದು ಲಕ್ಷ್ಮಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.