ADVERTISEMENT

ರಾಜ್ಯದಲ್ಲಿ ಎರಡು ದಿನ ಮಳೆ: 20 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 19:31 IST
Last Updated 10 ಅಕ್ಟೋಬರ್ 2021, 19:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.11 ಮತ್ತು 12ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅ.13 ರಿಂದ 15ರವರೆಗೆ ಹೆಚ್ಚು ಮಳೆಯಾಗುವ ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವ ಇರುವುದಾಗಿ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಮಳೆ ಎಲ್ಲಿ, ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಹಾಗೂ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಭಾನುವಾರ ತಲಾ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ.

ಅಥಣಿ 7, ಶಿಡ್ಲಘಟ್ಟ 5, ಕಾರವಾರ, ಚಿಂತಾಮಣಿ, ಶಿರಾ 4, ಮಾನ್ವಿ, ಗೌರಿಬಿದನೂರು, ಮಾಗಡಿ 3, ತೊಂಡೆಬಾವಿ 2, ಮಂಗಳೂರು, ಉಡುಪಿ, ಕೊಪ್ಪಳ, ಚಿಕ್ಕೋಡಿ, ಕಲಬುರಗಿ, ರಾಯಚೂರು, ಬೆಂಗಳೂರು ನಗರ, ನೆಲಮಂಗಲ, ಹಿರಿಯೂರು ಹಾಗೂ ಮಧುಗಿರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.