ADVERTISEMENT

ಭಾರಿ ಮಳೆ ಸಾಧ್ಯತೆ: 10 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 19:17 IST
Last Updated 9 ಜೂನ್ 2020, 19:17 IST
   

ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇದೇ 10 ಮತ್ತು 11ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರ ‘ಯೆಲ್ಲೊ ಅಲರ್ಟ್’ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುರುವಾರದಿಂದ ಧಾರಾಕಾರ ಮಳೆಯಾಗಲಿದೆ.

ಕಲಬುರ್ಗಿ ಹಾಗೂ ರಾಯಚೂರಿನಲ್ಲಿ ಮಂಗಳವಾರ ತಲಾ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನದಾಖಲಾಗಿದೆ.

ADVERTISEMENT

ಮೂಡಿಗೆರೆಯಲ್ಲಿ ಉತ್ತಮ ಮಳೆ
ಮೂಡಿಗೆರೆ: ತಾಲ್ಲೂಕಿನ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಒಂದು ತಾಸಿಗೂ ಅಧಿಕ ಕಾಲ ಧಾರಾಕಾರ ಮಳೆ ಸುರಿಯಿತು.

ಗಂಗನಮಕ್ಕಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಳೆ ನೀರು ಹರಿದು ಸಂಚಾರಕ್ಕೆ ಅಡ್ಡಿ ಉಂಟಾಯಿತು. ಮೂರ್ನಾಲ್ಕು ದಿನಗಳಿಂದ ತುಂತುರು ಮಳೆಯಾಗುತ್ತಿದ್ದ ಮಲೆನಾಡಿನಲ್ಲಿ ಮಂಗಳವಾರ ಸುರಿದ ಮಳೆಯು ಕೃಷಿ ಚಟುವಟಿಕೆಗೆ ಹದ ತಂದುಕೊಟ್ಟಿತು.

4.9 ಮಿ.ಮೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 4.9 ಮಿ. ಮೀ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು ನಗರದ ವ್ಯಾಪ್ತಿಯಲ್ಲಿ ಅತ್ಯಧಿಕ 10.6 ಮಿ.ಮೀ. ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.