ADVERTISEMENT

ಅಂತರ ರಾಜ್ಯ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 20:44 IST
Last Updated 31 ಜುಲೈ 2021, 20:44 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಏರುತ್ತಿರುವ ಬೆನ್ನಲ್ಲೇ, ಅಂತರ ರಾಜ್ಯ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಗಡಿ ಜಿಲ್ಲೆಗಳು ಹಾಗೂ ಕೋವಿಡ್‌ ಪ್ರಕರಣಗಳ ಏರಿಕೆ ಕಂಡುಬಂದಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ ಸಂಜೆ ವಿಡಿಯೊ ಕಾನ್ಫರೆನ್ಸ್‌ ನಡೆಸಿದ ಅವರು, ಕೋವಿಡ್‌ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಬಿಗಿ ಕ್ರಮಗಳನ್ನೂ ಕೈಗೊಳ್ಳುವಂತೆ ಸೂಚಿಸಿದರು.

ಅಂತರ ರಾಜ್ಯ ಗಡಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ತನಿಖಾ ಠಾಣೆ ಆರಂಭಿಸಬೇಕು. ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಪ್ರತಿ ಎರಡು ದಿನಕ್ಕೊಮ್ಮೆ ತನಿಖಾ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಕ್ವಾರಂಟೈನ್‌ ವ್ವವಸ್ಥೆ ಮಾಡಬೇಕು ಎಂದು ಆದೇಶಿಸಿದರು.

ADVERTISEMENT

ಎಲ್ಲ ಜಿಲ್ಲೆಗಳಲ್ಲೂ ಅಗತ್ಯ ಪ್ರಮಾಣದ ಆಮ್ಲಜನಕ ದಾಸ್ತಾನು ಮಾಡಬೇಕು. ಸ್ಥಳದಲ್ಲೇ ಆಮ್ಲಜನಕ ಉತ್ಪಾದಿಸುವ ಘಟಕಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಚಾಮರಾಜನಗರದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ವಾರದೊಳಗೆ ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.

ರೆಸಾರ್ಟ್‌ಗಳಿಗೆ ಬರುವ ಗ್ರಾಹಕರಿಗೂ ಆರ್‌ಟಿ–ಪಿಸಿಆರ್‌ ವಿಧಾನದಲ್ಲಿ ಪಡೆದ ‘ಕೋವಿಡ್‌ ನೆಗೆಟಿವ್‌’ ವರದಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.