ADVERTISEMENT

‘ರಾಜೀನಾಮೆ ಹೈಕಮಾಂಡ್ ನಿರ್ಧರಿಸುತ್ತದೆ’

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 20:26 IST
Last Updated 16 ಡಿಸೆಂಬರ್ 2019, 20:26 IST
ಶಾಸಕ ಡಿ.ಕೆ. ಶಿವಕುಮಾರ್ ಅವರು ನಗರದ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದಾರೆ –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ಶಾಸಕ ಡಿ.ಕೆ. ಶಿವಕುಮಾರ್ ಅವರು ನಗರದ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದಾರೆ –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌   

ಬೆಂಗಳೂರು: ‘ವಿಧಾನಸಭೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯನೀಡಿರುವ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸಿದ್ದರಾಮಯ್ಯ ಅವರನ್ನು ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿರುವುದು ನನಗಲ್ಲ. ಹೈಕಮಾಂಡ್‌ಗೆ ನೀಡಿದ್ದಾರೆ. ಹಾಗಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಆ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬುದನ್ನು ವರಿಷ್ಠರು ನಿರ್ಧರಿಸಲಿದ್ದಾರೆ’ ಎಂದು ತಿಳಿಸಿದರು.

‘ಮಾಧ್ಯಮಗಳಲ್ಲಿ ಹಲವು ವಿಚಾರಗಳು ಬರುತ್ತಿದ್ದು, ಅದಕ್ಕೆಲ್ಲ ತೆರೆ ಎಳೆಯಬೇಕು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದೇನೆ.ರಾಜಕಾರಣ ಅದರ ಪಾಡಿಗೆ ಅದು ನಡೆಯುತ್ತಿರುತ್ತದೆ. ಇಲ್ಲಿ ರಾಜಕಾರಣ ಮಾಡುವಂತಹುದು ಏನೂ ಇಲ್ಲ’ ಎಂದರು.

ADVERTISEMENT

‘ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ. ಸೋಲು ಸೋಲೇ. ಯಾರು ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ ಎಂಬುದು ಗೊತ್ತಿದೆ. ಸೋಲಿಗೆ ಆತ್ಮಾವಲೋಕನ ಮಾಡಿಕೊಂಡು ಮುಂದೆ ನಡೆಯಬೇಕಿದೆ. ಅಧಿವೇಶನದಲ್ಲಿ ಭಾಗವಹಿಸಿದ್ದರಿಂದ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಹೇಳಿದರು.

ಮಂಡ್ಯ ಸಂಸದೆ ಸುಮಲತಾ ಹಾಗೂ ಕಾಂಗ್ರೆಸ್‌ನ ಹಲವು ನಾಯಕರು ಭೇಟಿನೀಡಿ ಆರೋಗ್ಯ ವಿಚಾರಿಸಿದರು.

‘ಹೌದು ಹುಲಿಯಾ’ ಭೇಟಿ

ಸಿದ್ದರಾಮಯ್ಯ ಅವರನ್ನು ‘ಹೌದು ಹುಲಿಯಾ’ ಎಂದು ಕರೆಯುವ ಮೂಲಕ ಪ್ರಚಾರ ಪಡೆದಿದ್ದ ಪೀರಪ್ಪ ಕಟ್ಟೀಮನಿ ಸೋಮವಾರ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದರು.

ವಿಧಾನಸಭೆ ಉಪಚುನಾವಣೆ ಪ್ರಚಾರದ ವೇಳೆ ಕಾಗವಾಡದಲ್ಲಿ ಸಿದ್ದರಾಮಯ್ಯ ಭಾಷಣ ಮಾಡುವ ಸಮಯದಲ್ಲಿ ‘ಹೌದು ಹುಲಿಯಾ’ ಎಂದು ಕರೆದಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡಿತ್ತು. ನಂತರ ಟಿ.ವಿಗಳಲ್ಲಿ ಪ್ರಚಾರ ಪಡೆದುಕೊಂಡಿತ್ತು. ಪೀರಪ್ಪ ಅವರನ್ನು ಕರೆತಂದು ಟಿ.ವಿಗಳಲ್ಲಿ ಕಾರ್ಯಕ್ರಮಗಳನ್ನು ಕೊಡಿಸಲಾಗಿತ್ತು.

‘ಕಾವೇರಿ’ಯಲ್ಲಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ‌ಮಾಡಿ ಆರೋಗ್ಯ ವಿಚಾರಿಸಿದರು.

ಲಾಬಿ ಮಾಡುತ್ತಿಲ್ಲ:ಡಿ.ಕೆ.ಶಿವಕುಮಾರ್

‘ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಯಾವುದೇ ಲಾಬಿ ಮಾಡುತ್ತಿಲ್ಲ. ಆ ಸ್ಥಾನವೂ ಖಾಲಿ ಇಲ್ಲ’ ಎಂದು ಶಾಸಕ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

‘ಸಿದ್ದರಾಮಯ್ಯ ಅತ್ಯಂತ ಅದೃಷ್ಟಶಾಲಿ, ಸಮರ್ಥ ಮುಖ್ಯಮಂತ್ರಿ ಆಗಿದ್ದರು. 11 ವರ್ಷಗಳ ಕಾಲ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಸಮರ್ಥ ನಾಯಕರೇ ಆಗಿದ್ದಾರೆ’ ಎಂದರು.‌ ‘ಬಿಜೆಪಿಗೆ ಹೋಗಿ ಗೆದ್ದಿರುವ ಶಾಸಕರೇ ನಮ್ಮವರನ್ನು ನೀವೇ ನಮ್ಮ ನಾಯಕರು ಎನ್ನುತ್ತಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಬ್ಬ ನಾಯಕನೇ ಅಲ್ಲ’ ಎಂದು ಕುಟುಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.