ADVERTISEMENT

ಸ್ಥಳೀಯ ಸಂಸ್ಥೆಗಳ ಚುನಾವಣೆ ಮೀಸಲಾತಿ ನಿಗದಿ ವಿಚಾರ: ಸರ್ಕಾರಕ್ಕೆ ಹೈಕೋರ್ಟ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 16:03 IST
Last Updated 19 ಜನವರಿ 2026, 16:03 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಿಗದಿಪಡಿಸುವ ಮೀಸಲಾತಿಯನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆಗಳಿರುತ್ತವೆ. ಆದ್ದರಿಂದ, ಮೀಸಲಾತಿ ನಿಗದಿಪಡಿಸುವಾಗ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಕ್ಷ್ಮವಾಗಿ ಎಚ್ಚರಿಸಿದೆ.

ಕೋಲಾರ ನಗರಸಭೆಯ ಚುನಾಯಿತ ಸದಸ್ಯರ ಅಧಿಕಾರವಧಿ ಮುಕ್ತಾಯಗೊಂಡಿರುವ ಕಾರಣದಿಂದ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಎಸ್.ಆರ್.ಮುರಳಿಗೌಡ ಸೇರಿದಂತೆ ಒಟ್ಟು 15 ಜನರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ‘23 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಸಿದ್ಧವಾಗಿದ್ದು, ಅನುಮೋದನೆಗಾಗಿ ಸಂಬಂಧಪಟ್ಟ ಖಾತೆಯ ಸಚಿವರಿಗೆ ಕಳುಹಿಸಿಕೊಡಲಾಗಿದೆ. ಅದೇ ರೀತಿ 28 ನಗರ ಸ್ಥಳೀಯ ಸಂಸ್ಥೆಗಳ ಕರಡು ಮೀಸಲಾತಿಯನ್ನೂ ಪ್ರಕಟಿಸಲಾಗಿದೆ. ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದ ಬಳಿಕ ಅದನ್ನು ರಾಜ್ಯ ಚುನಾವಣಾ ಆಯೋಗಕ್ಕೆ ರವಾನಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಮೀಸಲಾತಿ ಪಟ್ಟಿ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿರುತ್ತವೆ. ಆದ್ದರಿಂದ, ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಿ’ ಎಂದು ಎಂದು ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿ ವಿಚಾರಣೆಯನ್ನು ಫೆಬ್ರುವರಿ 23ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.