ADVERTISEMENT

ಬೇಲೆಕೇರಿ: ದೋಷಾರೋಪ ಪಟ್ಟಿ ರದ್ದು ಕೋರಿದ್ದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 20:23 IST
Last Updated 17 ಅಕ್ಟೋಬರ್ 2020, 20:23 IST

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಲ್ಲಿದ್ದಲು ರಫ್ತು ಮಾಡಿದ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿ ರದ್ದುಗೊಳಿಸುವಂತೆ ಕೋರಿ ಮಾಜಿ ಶಾಸಕ ಸತೀಶ್ ಸೈಲ್‌ ಸೇರಿ ಹಲವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಪ್ರಕರಣದಿಂದ ಕೈಬಿಡಲು ಕೋರಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಈ ಹಿಂದೆ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

2009 ಜನವರಿ 1ರಿಂದ 2010 ಮೇ 31ರ ಅವಧಿಯಲ್ಲಿ ಸುಮಾರು 50.79 ಲಕ್ಷ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ತೆಗೆದು ರಫ್ತು ಮಾಡಿರುವ ಪ್ರಕರಣದಲ್ಲಿ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ADVERTISEMENT

‘ಯಾವುದೇ ಅವ್ಯವಹಾರದಲ್ಲಿ ನಾನು ಭಾಗಿಯಾಗಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ನನ್ನನ್ನು ಬಲಿಪಶು ಮಾಡಿದ್ದಾರೆ’ ಎಂದು ಬಂದರು ಸಂರಕ್ಷಣಾಧಿಕಾರಿ ಮಹೇಶ್ ಜೆ. ಬಿಲಿಯೆ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

‘ಆರೋಪಿಗಳು ಕಂಪನಿಯ ವಿರುದ್ಧ ಮಾತ್ರ ಇವೆ. ‘ಖನಿಜ’ ಎಂದು ವ್ಯಾಖ್ಯಾನಿಸಲಾದ ಕಬ್ಬಿಣದ ಅದಿರನ್ನು ವಶಪಡಿಸಿಕೊಳ್ಳಲು ಅರಣ್ಯ ಅಧಿಕಾರಿಗಳಿಗೆ ಯಾವುದೇ ಅಧಿಕಾರ ಇಲ್ಲ’ ಎಂದು ಶ್ರೀ ಮಲ್ಲಿಕಾರ್ಜುನ ಶಿಪ್ಪಿಂಗ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಸೈಲ್‌ ಮತ್ತು ಇತರರು ಅರ್ಜಿಯಲ್ಲಿ ವಾದಿಸಿದ್ದಾರೆ.

ಈ ಪ್ರಕರಣದಲ್ಲಿ ಅರ್ಜಿದಾರರು ಭಾಗಿಯಾಗಿರುವ ಬಗ್ಗೆ ಸಿಬಿಐ ವಕೀಲ ಪಿ. ಪ್ರಸನ್ನಕುಮಾರ್ ಸಲ್ಲಿಸಿದ್ದ ದಾಖಲೆಗಳನ್ನು ಪರಿಗಣಿಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರು, ಎಲ್ಲಾ ಆರೋಪಿಗಳ ಅರ್ಜಿಗಳನ್ನು ವಜಾಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.