ಬಿಎಸ್‌ವೈ
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ, ‘ಪೊಲೀಸರು ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ’ ಎಂಬ ತನ್ನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಡಿಸೆಂಬರ್ 2ರವರೆಗೆ ಪುನಃ ವಿಸ್ತರಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಆದ ಹಿರಿಯ ವಕೀಲ ರವಿವರ್ಮ ಕುಮಾರ್, ‘ವಿಶೇಷ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಕಲಂ 35ರ ಪ್ರಕಾರ ಅಪರಾಧಕ್ಕೆ ಸಂಬಂಧಿಸಿದಂತೆ ಮಾಡಲಾಗಿರುವ ಆರೋಪವನ್ನು ಪರಿಗಣಿಸಿದ ನಂತರ ಒಂದು ತಿಂಗಳ ಅವಧಿಯಲ್ಲಿ ಸಾಕ್ಷಿ ಹಾಗೂ ಆರೋಪಿಯ ಹೇಳಿಕೆ ದಾಖಲಿಸಿಕೊಳ್ಳುವುದು ಕಡ್ಡಾಯ. ಆದರೆ, ಪ್ರಕರಣದಲ್ಲಿ ಆರೋಪ ಪರಿಗಣಿಸಿ ಈಗಾಗಲೇ ಆರು ತಿಂಗಳು ಕಳೆದಿದೆ’ ಎಂದು ಆಕ್ಷೇಪಿಸಿದರು.
‘ಈ ಹಿನ್ನೆಲೆಯಲ್ಲಿ ಅರ್ಜಿದಾರ ಆರೋಪಿಗೆ ಪೋಕ್ಸೊ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ವಿನಾಯಿತಿ ನೀಡಿ ಹೈಕೋರ್ಟ್ ಈ ಹಿಂದೆ ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು’ ಎಂದು ಮನವಿ ಮಾಡಿದರು.
ಯಡಿಯೂರಪ್ಪ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ‘ಅರ್ಜಿಗೆ ಸಂಬಂಧಿಸಿದಂತೆ ನನ್ನ ವಾದ ಮಂಡನೆಯನ್ನು ಸೋಮವಾರ ಪೂರ್ಣಗೊಳಿಸುತ್ತೇನೆ’ ಎಂದು ತಿಳಿಸಿದರು. ಅಂತೆಯೇ, ನ್ಯಾಯಪೀಠವು ರವಿವರ್ಮ ಕುಮಾರ್ ಅವರಿಗೆ, ‘ನಿಮ್ಮ ಮನವಿಯನ್ನು ಅಂದೇ ತೀರ್ಮಾನಿಸಿ ವಿಚಾರಣೆಯನ್ನೇ ಪೂರೈಸಿಬಿಡೋಣ’ ಎಂದು ತಿಳಿಸಿ ವಿಚಾರಣೆಯನ್ನು ಸೋಮವಾರ (ಡಿ.2) ಮಧ್ಯಾಹ್ನ 2.30ಕ್ಕೆ ನಿಗದಿಪಡಿಸಿತು. ಯಡಿಯೂರಪ್ಪ ಪರ ವಕಾಲತ್ತು ವಹಿಸಿರುವ ಸಂದೀಪ್ ಪಾಟೀಲ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.