ADVERTISEMENT

ಪ್ರಧಾನ ಕಾರ್ಯದರ್ಶಿ ಹಾಜರಿಗೆ ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 16:08 IST
Last Updated 3 ಜನವರಿ 2022, 16:08 IST

ಬೆಂಗಳೂರು: ‘ಅಪರಾಧ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ನೀಡಲು ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಮಂದಿನ ವಿಚಾರಣೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕೋರ್ಟ್‌ಗೆ ಖುದ್ದು ಹಾಜರಾಗಬೇಕು’ ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಲೈಂಗಿಕ ದೌರ್ಜನ್ಯಕ್ಕೆ ಸಿಲುಕಿದ ಮಹಿಳೆಯರ ಸುರಕ್ಷತೆ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ, ’ಲೈಂಗಿಕ ದೌರ್ಜನ್ಯದ ವಿರುದ್ಧ ಜನರ ಚಳವಳಿ’ (ಪೀಪಲ್ಸ್ ಮೂವ್‌ಮೆಂಟ್‌ ಎಗೈನೆಸ್ಟ್ ಸೆಕ್ಷ್ಯುಯಲ್ ಅಸಾಲ್ಟ್) ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ಪರ ವಕೀಲರು, ‘ಸಂತ್ರಸ್ತರಿಗೆ ಪರಿಹಾರವಾಗಿ ಕೆಎಸ್ಎಲ್ಎಲ್ಎಗೆ ಹಣ ಬಿಡುಗಡೆ ಮಾಡಲು ಹೈಕೋರ್ಟ್ ನಿರ್ದೇಶನ ನೀಡಿದ್ದರೂ, ಸರ್ಕಾರ ಈವರೆಗೆ ಹಣ ಬಿಡುಗಡೆ ಮಾಡಿಲ್ಲ’ ಎಂದು ಆಕ್ಷೇಪಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ರಾಜ್ಯ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ವಿಚಾರಣೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕೋರ್ಟ್‌ಗೆ ಖುದ್ದು ಹಾಜರಾಗಬೇಕು’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಕೋರಿಕೆಯೇನು?: ‘ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಅಗತ್ಯ ರಕ್ಷಣೆ ಹಾಗೂ ಸೌಲಭ್ಯ ಸಿಗುತ್ತಿಲ್ಲ. ಆದ್ದರಿಂದ, ಸಂತ್ರಸ್ತ ಮಹಿಳೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅಡಿ ಪರಿಹಾರ ಒದಗಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.