ADVERTISEMENT

ಕಲ್ಲೂರು ಕೋರ್ಟ್‌ ಕಟ್ಟಡ ನಿರ್ಮಾಣ: ರಾಜ್ಯ ಸರ್ಕಾರಕ್ಕೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 16:34 IST
Last Updated 16 ಫೆಬ್ರುವರಿ 2026, 16:34 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಮಂಜೂರು ಮಾಡಿರುವ ಜಮೀನು ಅರಣ್ಯ ಇಲಾಖೆಗೆ ಸೇರಿದ್ದೋ ಅಥವಾ ಇಲ್ಲವೋ ಎಂಬ ಬಗ್ಗೆ ಪರಿಶೀಲನೆ ನಡೆಸಿ ಉತ್ತರಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಶ್ರೀನಿವಾಸಪುರ ತಾಲ್ಲೂಕಿನ ಪಾತಪಲ್ಲಿಯ ಸಿ.ಶ್ರೀನಿವಾಸರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಕಲ್ಲೂರು ಗ್ರಾಮದ ಸರ್ವೇ ನಂಬರ್‌ 31 ಅರಣ್ಯ ಇಲಾಖೆಗೆ ಸೇರಿದ ಜಮೀನಾಗಿದೆ. ಆದರೆ, ಇದರಲ್ಲಿ ಐದು ಎಕರೆ ಜಾಗವನ್ನು ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಈ ಮೂಲಕ ಅರಣ್ಯ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ’ ಎಂದು ಆಕ್ಷೇಪಿಸಿದರು.

ADVERTISEMENT

ಇದಕ್ಕೆ ಸರ್ಕಾರದ ಪರ ವಕೀಲರು, ‘ಈಗಾಗಲೇ ನ್ಯಾಯಾಲಯ ಸಂಕೀರ್ಣ ಕಾಮಗಾರಿ ಪ್ರಗತಿಯಲ್ಲಿದ್ದು, ಬಹುತೇಕ ಮುಕ್ತಾಯದ ಹಂತ ತಲುಪಿದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರ್ಜಿದಾರರು ಕಟ್ಟಡ ನಿರ್ಮಾಣದ ಜಮೀನು ಅರಣ್ಯ ಇಲಾಖೆಗೆ ಸೇರಿದೆ ಎಂದು ಹೇಳುತ್ತಿದ್ದಾರೆ. ಹಾಗಾಗಿ, ಈ ಜಮೀನು ನಿಜವಾಗಿಯೂ ಅರಣ್ಯ ಇಲಾಖೆಗೆ ಸೇರಿದೆಯೋ ಇಲ್ಲವೂ ಎಂಬುದನ್ನು ಪರಿಶೀಲಿಸಿ ಉತ್ತರಿಸಿ’ ಎಂದು ಸೂಚಿಸಿ ನೀಡಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.