ADVERTISEMENT

ಕೆಎಸ್‌ಪಿಸಿಬಿ ಅಧ್ಯಕ್ಷರ ಆಯ್ಕೆಗೆ ಹೊಸ ಪ್ರಕ್ರಿಯೆ ಆರಂಭಿಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 16:37 IST
Last Updated 27 ಫೆಬ್ರುವರಿ 2021, 16:37 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಹೊಸದಾಗಿ ಆರಂಭಿಸಲು ರಾಜ್ಯ ಸರ್ಕಾರಕ್ಕೆಹೈಕೋರ್ಟ್ ನಿರ್ದೇಶನ ನೀಡಿದೆ.

‘ಕೇವಲ ಶೈಕ್ಷಣಿಕ ಅರ್ಹತೆ ಹೊಂದಿದ್ದರೆ ಸಾಕಾಗುವುದಿಲ್ಲ. ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಅನುಭವ ಹೊಂದಿರಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

‘ವಾಯುಮಾಲಿನ್ಯ, ನೀರಿನ ಮಾಲಿನ್ಯ, ಇ-ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ, ನಿರ್ಮಾಣ ತ್ಯಾಜ್ಯ ಮತ್ತು ಮುಖ್ಯವಾಗಿ ಘನತ್ಯಾಜ್ಯ ನಿಭಾಯಿಸುವ ಜ್ಞಾನ ಹೊಂದಿದವರು ಮಂಡಳಿಯಲ್ಲಿ ಇರಬೇಕು ಎಂದು ಪೀಠ 2020ರ ಅಕ್ಟೋಬರ್ 8ರಂದು ನೀಡಿರುವ ಆದೇಶ ಮಾರ್ಪಡಿಸಬೇಕು’ ಎಂದು ರಾಜ್ಯ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿತು.

ADVERTISEMENT

ಮಾರ್ಪಾಡು ಮಾಡಲು ನಿರಾಕರಿಸಿದ ಪೀಠ, ‘ಅಧ್ಯಕ್ಷರಾದವರು ಪರಿಸರ ಮಾಲಿನ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾದಾಗ ನಿಭಾಯಿಸಬೇಕಾಗುತ್ತದೆ. ಹೀಗಾಗಿ ಅವರಿಗೆ ಪರಿಸರಕ್ಕೆ ಸಂಬಂಧಿಸಿದ ಜ್ಞಾನ ಇರಬೇಕು. ಪರಿಸರಕ್ಕೆ ಸಂಬಂಧಿಸಿದ ಸರ್ಕಾರ ಹುದ್ದೆ ಅಥವಾ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವಾದರೂ ಇರಬೇಕಾಗುತ್ತದೆ’ ಎಂದು ಹೇಳಿತು.

‘ಸದಸ್ಯರ ನೇಮಕಕ್ಕೂ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾನದಂಡಗಳಿಗೆ ಅನ್ವಯವಾಗಿಲ್ಲ’ ಎಂದು ಪೀಠ ಪುನರುಚ್ಚರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.