ಬೆಂಗಳೂರು: ಉಡುಪಿಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ (ಎಸ್‌ಸಿಡಿಸಿಸಿ) ಮಹಿಳಾ ಉದ್ಯೋಗಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಬ್ಯಾಂಕ್ ಮೇಲ್ವಿಚಾರಕ ಉದಯಕುಮಾರ್ ಶೆಟ್ಟಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಈ ಸಂಬಂಧ ಕುಂದಾಪುರ ತಾಲ್ಲೂಕಿನ ಐರಬೈಲು ಉಳ್ಳೂರು ಗ್ರಾಮದ ಉದಯಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಪುರಸ್ಕರಿಸಿ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.
ಪ್ರಕರಣವೇನು?: ‘ಎಸ್‌ಸಿಡಿಸಿಸಿ ಬ್ಯಾಂಕ್ ಸಹಾಯಕ ಮ್ಯಾನೇಜರ್ ಆಗಿದ್ದ ನನ್ನ ಪತ್ನಿ ಆಶಾ 2024ರ ಮಾರ್ಚ್ 23ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕ್ ಮೇಲ್ವಿಚಾರಕ ಉದಯ ಕುಮಾರ್ ಶೆಟ್ಟಿ, ಆಶಾ ವಿರುದ್ಧ ಹಣದ ವಂಚನೆಯ ಆರೋಪ ಹೊರಿಸಿದ್ದರು. ಹಣ ಮರುಪಾವತಿಗಾಗಿ ಒತ್ತಾಯಿಸುತ್ತಿದ್ದರು. ವಾಪಸು ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಹೇಳಿದ್ದರು. ಇದರಿಂದಲೇ ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಆರೋಪಿಸಿ ಆಶಾ ಅವರ ಪತಿ ಉಡುಪಿ ಜಿಲ್ಲೆಯ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಉದಯ ಕುಮಾರ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.