ADVERTISEMENT

ತೇಜಸ್ವಿನಿ ಗೌಡ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 27 ಮೇ 2025, 23:51 IST
Last Updated 27 ಮೇ 2025, 23:51 IST
ತೇಜಸ್ವಿನಿ ಗೌಡ
ತೇಜಸ್ವಿನಿ ಗೌಡ   

ಬೆಂಗಳೂರು: ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ವಿಧಾನ ಪರಿಷತ್‌ ಸದಸ್ಯೆ ಹಾಗೂ ಮಾಜಿ ಸಂಸದೆ ತೇಜಸ್ವಿನಿ ಗೌಡ (ಸದ್ಯ ಕಾಂಗ್ರೆಸ್‌ ಪಕ್ಷದಲ್ಲಿದ್ದಾರೆ) ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧದ ಎಫ್‌ಐಆರ್‌ ಮತ್ತು ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ತೇಜಸ್ವಿನಿ ಗೌಡ (55) ಸಲ್ಲಿಸಿದ್ದ  ಕ್ರಿಮಿನಲ್‌ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ರಜಾಕಾಲದ ನ್ಯಾಯಮೂರ್ತಿ ಸೂರಜ್‌ ಗೋವಿಂದ ರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಪ್ರಕರಣವೇನು?:

‘ಕಾಂಗ್ರೆಸ್‌ ಸರ್ಕಾರ ಜನವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದೆ’ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್‌.ಅಶೋಕ, ತೇಜಸ್ವಿನಿ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು 2023ರ ಜೂನ್ 20ರಂದು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ADVERTISEMENT

‘ಪ್ರತಿಭಟನೆ ನಡೆಸಲು ನೀವುಗಳು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹಾಗಾಗಿ, ಪ್ರತಿಭಟನೆ ನಡೆಸಬೇಡಿ ಎಂದು ಸೂಕ್ತ ತಿಳಿವಳಿಕೆ ನೀಡಿದರೂ ಪ್ರತಿಭಟನೆ ಮುಂದುವರಿಸಿದರು’ ಎಂದು ಆರೋಪಿಸಿ ಹೈಗ್ರೌಂಡ್ಸ್‌ ಠಾಣೆಯ ಪಿಎಸ್‌ಐ ಅನಿಲ್‌ ಕುಮಾರ್‌ ಮುಳ್ಳೂರ ಅವರು ನಗರದ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ತೇಜಸ್ವಿನಿ ಗೌಡ ಸೇರಿದಂತೆ ಇತರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿತ್ತು.

ಭಾರತೀಯ ದಂಡ ಸಂಹಿತೆ–1860ರ ಕಲಂ 283, 188 ಮತ್ತು 34 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 103ರ ಅಪರಾಧಗಳ ಅಡಿ ತನಿಖೆ ನಡೆಸಿ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು ಮ್ಯಾಜಿಸ್ಟ್ರೇಟ್‌ (ಜನಪ್ರತಿನಿಧಿಗಳ) ವಿಶೇಷ ನ್ಯಾಯಾಲಯ 2025ರ ಫೆಬ್ರುವರಿ 12ರಂದು ವಿಚಾರಣೆಗೆ ಪರಿಗಣಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.