ಕರ್ನಾಟಕ ಹೈಕೋರ್ಟ್
ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹಿಗ್ಗಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇಕಡ 50ರಿಂದ 56ಕ್ಕೆ ಹೆಚ್ಚಿಸಿದ್ದ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಸಂಬಂಧ ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿತು.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೂಬೆನ್ ಜೇಕಬ್, ‘ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮತ್ತೊಂದು ಪೀಠ, ನೇಮಕಾತಿ ಪ್ರಕ್ರಿಯೆಯಗಳನ್ನು ನಡೆಸಬಹುದು. ಆದರೆ, ನೇಮಕಾತಿ ಆದೇಶಗಳನ್ನು ನೀಡಬಾರದು ಎಂದು ಆದೇಶಿಸಿದೆ. ಹೀಗಾಗಿ, ಅದೇ ಆದೇಶವನ್ನು ಈ ಅರ್ಜಿಯಲ್ಲಿಯೂ ಮುಂದುವರಿಸಬೇಕು. ಕಳೆದ ಒಂದು ವರ್ಷದಿಂದ ನೇಮಕಾತಿ ನಡೆದಿಲ್ಲ. ಈಗಷ್ಠೇ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕಾಯ್ದೆ ಅನುಷ್ಠಾನಕ್ಕೆ ತಡೆ ನೀಡಿದರೆ ಮತ್ತಷ್ಟು ವಿಳಂಬವಾಗಲಿದೆ’ ಎಂದು ನ್ಯಾಯಪೀಠಕ್ಕೆ ಅರುಹಿದರು.
‘ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗವನ್ನು ರಚನೆ ಮಾಡಲಾಗಿತ್ತು. ಈ ಆಯೋಗವು, ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ದತ್ತಾಂಶ ಸಂಗ್ರಹಿಸಿ ಹಲವು ಶಿಫಾರಸುಗಳನ್ನು ಮಾಡಿದೆ. ಇದರ ಆಧಾರದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಕಾಯ್ದೆ ರೂಪಿಸಲಾಗಿದೆ’ ಎಂದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ‘ಇಷ್ಟು ದಿನ ಸರ್ಕಾರ ಏನು ಮಾಡುತ್ತಿತ್ತು. ಇನ್ನೂ ಆರು ತಿಂಗಳವರೆಗೆ ನೇಮಕಾತಿ ಮಾಡದಿದ್ದರೆ ಏನೂ ಆಗುವುದಿಲ್ಲ. ಮೊದಲು ಅರ್ಜಿಯಲ್ಲಿ ಎತ್ತಿರುವ ಕಾನೂನಾತ್ಮಕ ಅಂಶಗಳು ಪರಿಹಾರವಾಗಲಿ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆಯನ್ನು ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.