ಹೈಕೋರ್ಟ್
ಬೆಂಗಳೂರು: ‘ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ (ಬಾಲಕ) ಜೊತೆಗೆ ಮುಜುಗುರ ಉಂಟು ಮಾಡುವ ರೀತಿಯಲ್ಲಿ ಪೋಟೊ ಕ್ಲಿಕ್ಕಿಸಿಕೊಂಡಿದ್ದಾರೆ ಹಾಗೂ ವಿಡಿಯೊ ಮಾಡಿಸಿಕೊಂಡಿದ್ದಾರೆ’ ಎಂದು ಆರೋಪಿಸಲಾದ ಪ್ರೌಢಶಾಲೆ ಮುಖ್ಯ ಶಿಕ್ಷಕಿಯೊಬ್ಬರ ನಡೆಗೆ ಸಂಬಂಧಿಸಿದ ಪ್ರಕರಣದಲ್ಲಿ; ಮುಖ್ಯ ಶಿಕ್ಷಕಿ ವರ್ತನೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
‘ನನ್ನ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ 43 ವರ್ಷದ ಮುಖ್ಯ ಶಿಕ್ಷಕಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಈ ಕುರಿತಂತೆ ಅತೃಪ್ತಿ ಹೊರಹಾಕಿದೆ.
ವಿಚಾರಣೆ ವೇಳೆ ಮುಖ್ಯ ಶಿಕ್ಷಕಿ ಪರ ವಕೀಲರು, ‘ಶಿಕ್ಷಕಿ ಮತ್ತು ವಿದ್ಯಾರ್ಥಿ ನಡುವೆ ಯಾವುದೇ ಲೈಂಗಿಕ ಉದ್ದೇಶವಿರಲಿಲ್ಲ. ಇಬ್ಬರ ನಡುವೆ ತಾಯಿ-ಮಗನ ಸಂಬಂಧವಿದೆ. ವಿದ್ಯಾರ್ಥಿಗೆ ಅರ್ಜಿದಾರರು ಕೇರ್ ಟೇಕಿಂಗ್ ಶಿಕ್ಷಕಿಯಾಗಿದ್ದಾರೆ’ ಎಂದು ಸಮಜಾಯಿಷಿ ನೀಡಿದರು.
ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಮೂರ್ತಿಯು, ‘ವಿದ್ಯಾರ್ಥಿಯ ಜೊತೆಗೆ ಎಂತಹ ವಿಪರೀತ ಉತ್ಸಾಹವಿದು? ಮುಖ್ಯ ಶಿಕ್ಷಕಿಯೊಬ್ಬರು ಇಂತಹ ಕೆಲಸ ಮಾಡಬಾರದು. ಇದೊಂದು ಅನಪೇಕ್ಷಿತ ನಡೆ. ಇಂಥವರನ್ನು ಶಿಕ್ಷಕಿ ಹಾಗೂ ವಿದ್ಯಾರ್ಥಿ ಎನ್ನಬಹುದೇ’ ಎಂದು ಖಾರವಾಗಿ ಪ್ರಶ್ನಿಸಿದರು.
‘ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲಾಗದು. ಆರೋಪಗಳನ್ನು ಕೈ ಬಿಡಲು ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಿ’ ಎಂದು ಮೌಖಿಕವಾಗಿ ಸೂಚಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮುಂದೂಡಿದರು. ಮುಖ್ಯ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.