ADVERTISEMENT

ಅತ್ಯಾಚಾರ ಪ್ರಕರಣ | ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ: ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2025, 16:18 IST
Last Updated 7 ಏಪ್ರಿಲ್ 2025, 16:18 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ಬೆಂಗಳೂರು: ‘ಪ್ರಕರಣದ ಇತರ ಆರೋಪಿಗಳ ವಿರುದ್ಧದ ವಿಚಾರಣೆಗೆ ಮಧ್ಯಂತರ ತಡೆ ನೀಡಲಾಗಿದೆ ಎಂಬ ತಳಹದಿಯಲ್ಲಿ ನೀವೂ ಜಾಮೀನು ಕೋರಲು ಸಾಧ್ಯವಿಲ್ಲ’ ಎಂದು ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯೂ ಆದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಅತ್ಯಾಚಾರ ಆರೋಪದ ಮೊದಲ ಪ್ರಕರಣದಲ್ಲಿ ಎರಡನೇ ಬಾರಿ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ಅವರು ಸೋಮವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಪ್ರಜ್ವಲ್‌ ಪರ ಪದಾಂಕಿತ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ, ‘ಆರೋಪಿತ ಅತ್ಯಾಚಾರ 2021ರಲ್ಲಿ ನಡೆದಿದೆ ಎನ್ನಲಾಗಿದ್ದು, ನಾಲ್ಕೂವರೆ ವರ್ಷಗಳ ಬಳಿಕ ದೂರು ದಾಖಲಿಸಲಾಗಿದೆ. ದೂರುದಾರರು ಇದಕ್ಕೆ ಯಾವುದೇ ವಿವರಣೆ ನೀಡಿಲ್ಲ. ಹೀಗಾಗಿ, ಅರ್ಜಿದಾರರನ್ನು ಜೈಲಿನಲ್ಲೇ ಇರುವಂತೆ ಮಾಡಲಾಗದು’ ಎಂದರು.

ADVERTISEMENT

ಇದಕ್ಕೆ, ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌, ‘ಪ್ರಜ್ವಲ್‌ ವಿರುದ್ದ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗಿವೆ. ಇವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲೂ ತಿರಸ್ಕೃತವಾಗಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇತರೆ ಆರೋಪಿಗಳ ವಿರುದ್ಧ ತಡೆಯಾಜ್ಞೆ ಇದ್ದರೂ ಮೇಲ್ನೋಟಕ್ಕೆ ಪ್ರಜ್ವಲ್‌ ವಿರುದ್ಧ ನಂಬಲರ್ಹ ಸಾಕ್ಷ್ಯಾಧಾರಗಳಿವೆ. ವಿಶೇಷ ಕಾರಣ ತೋರದ ಹೊರತು ಜಾಮೀನು ನೀಡಲಾಗುತ್ತದೆಯೇ’ ಎಂದು ಪ್ರಶ್ನಿಸಿತಲ್ಲದೆ, ‘ಯಾವುದಕ್ಕೂ ನಿಮ್ಮ ವಾದ ಆಲಿಸಲಾಗುವುದು’ ಎಂದು ತಿಳಿಸಿತು. ಆಕ್ಷೇಪಣೆ ಸಲ್ಲಿಸುವಂತೆ ಪ್ರಾಸಿಕ್ಯೂಷನ್‌ಗೆ ಸೂಚಿಸಿ, ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.