ADVERTISEMENT

ಕಲಬುರ್ಗಿ ಕೋಟೆ ಪ್ರದೇಶ: ಒತ್ತುವರಿ ತೆರವುಗೊಳಿಸುವಂತೆ ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 6:53 IST
Last Updated 11 ಡಿಸೆಂಬರ್ 2019, 6:53 IST
   

ಬೆಂಗಳೂರು:‘ಘೋಷಿತ ಸ್ಮಾರಕ ಎನಿಸಿರುವ ಕಲಬುರ್ಗಿಯ ಐತಿಹಾಸಿಕ ಕೋಟೆ ಪ್ರದೇಶ ವ್ಯಾಪ್ತಿಯಲ್ಲಿನ ಒತ್ತುವರಿ ತೆರವುಗೊಳಿಸಲು ಕಲಬುರ್ಗಿ ಜಿಲ್ಲಾಧಿಕಾರಿ 15 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.

‘ಒತ್ತುವರಿದಾರರನ್ನು ತೆರವುಗೊಳಿಸಬೇಕು’ ಎಂದು ಕೋರಿ ಎಂ.ಎಸ್‌.ಶರಣ್ ದೇಸಾಯಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ರವಿ ನೇತೃತ್ವ ಎಲ್ಲಿ ಹಾಗೂ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಒತ್ತುವರಿ ತೆರವುಗೊಳಿಸಲು ಸರ್ವೇಕ್ಷಣಾ ಮತ್ತು ಪುರಾತತ್ವ ಇಲಾಖೆ ಈಗಾಗಲೇ ನೋಟಿಸ್ ನೀಡಿದೆ. ನೋಟಿಸ್ ಅನ್ವಯ ಹದಿನೈದು ದಿನಗಳಲ್ಲಿ ತೆರವುಗೊಳಿಸಬೇಕು ಎಂದು ತಿಳಿಸಿತ್ತು. ಆದರೆ, ಇನ್ನೂ ತೆರವುಗೊಳಿಸಿಲ್ಲ’ಎಂದು ವಿವರಿಸಿದರು.

ADVERTISEMENT

ಇದಕ್ಕೆ ನ್ಯಾಯಪೀಠವು, ‌ತೆರವು ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿ ವಿಚಾರಣೆಯನ್ನು 2020ರ ಜನವರಿ ಕೊನೆಯ ವಾರಕ್ಕೆ ಮುಂದೂಡಿದೆ.

ಆಕ್ಷೇಪಣೆ ಏನು?: ‘ಮಾಹಿತಿ ಹಕ್ಕು ಕಾಯ್ದೆ ಅಡಿ 2011ರಲ್ಲಿ ಪಡೆದುಕೊಂಡಿರುವ ಮಾಹಿತಿಯಂತೆ ಕಲಬುರ್ಗಿ ಕೋಟೆಯ ಒಳಗೆ ಮತ್ತು ಹೊರಗೆ 194 ಕುಟುಂಬಗಳು ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನೆಲೆಸಿವೆ. ಈ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆ ಅಥವಾ ಸ್ಥಳೀಯ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.