ADVERTISEMENT

ಕಸಾಪ ಅವ್ಯವಹಾರ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ಕೆಲವು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 15:56 IST
Last Updated 22 ಜುಲೈ 2025, 15:56 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಆದಾಯ, ಅನುದಾನ, ಖರೀದಿ ಮತ್ತು ಮಾರಾಟ ಸೇರಿದಂತೆ ಆರ್ಥಿಕ ವಹಿವಾಟಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುವುದಕ್ಕಾಗಿ, ಸಹಕಾರ ಸಂಘಗಳ ಉಪ ನಿಬಂಧಕರು ಹೊರಡಿಸಿರುವ ಆದೇಶದ ಬಳಿಕ ಕೈಗೊಂಡ ಆಡಳಿತಾತ್ಮಕ ಪ್ರಕ್ರಿಯೆ ಹಾಗೂ ಅದರ ದಾಖಲೆಗಳನ್ನು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಬೆಂಗಳೂರು ನಗರ ಜಿಲ್ಲೆಯ 2ನೇ ವೃತ್ತದ ಸಹಕಾರ ಸಂಘಗಳ ಡೆಪ್ಯುಟಿ ರಿಜಿಸ್ಟ್ರಾರ್‌ ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ಹಾಗೂ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು.

ADVERTISEMENT

ಪ್ರಕರಣವೇನು?: ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಪತ್ರಕರ್ತ ಮತ್ತು ಲೇಖಕ ಜಾಣಗೆರೆ ವೆಂಕಟರಾಮಯ್ಯ ಹಾಗೂ ಲೇಖಕಿ ಡಾ.ವಸುಂಧರಾ ಭೂಪತಿ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ರದ್ದುಪಡಿಸಿ ಸಹಕಾರ ಸಂಘಗಳ ಉಪನಿಬಂಧಕರು 2025ರ ಜೂನ್ 27ರಂದು ಆದೇಶ ಹೊರಡಿಸಿದ್ದರು.

‘ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆ ರದ್ದುಪಡಿಸಿ ಹಾಗೂ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ 2ನೇ ವಲಯ ಬೆಂಗಳೂರು ನಗರ ಜಿಲ್ಲಾ ಇವರು 2025ರ ಜೂನ್ 26 ಹಾಗೂ 30ರಂದು ಹೊರಡಿಸಿರುವ ಆದೇಶಗಳನ್ನು ರದ್ದುಪಡಿಸಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.