ADVERTISEMENT

ಡಿಕೆಶಿ ವಿರುದ್ಧದ ತನಿಖೆ ಯಾಕೆ ಪೂರ್ಣಗೊಳಿಸಿಲ್ಲ: ಸಿಬಿಐಗೆ ಹೈಕೋರ್ಟ್‌ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2024, 16:27 IST
Last Updated 5 ಏಪ್ರಿಲ್ 2024, 16:27 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ನಾಲ್ಕು ವರ್ಷಗಳಾದರೂ ವಿಚಾರಣಾ ನ್ಯಾಯಾಲಯಕ್ಕೆ ಇನ್ನೂ ಏಕೆ ಅಂತಿಮ ವರದಿ ಸಲ್ಲಿಸಿಲ್ಲ’ ಎಂದು ಹೈಕೋರ್ಟ್ ಸಿಬಿಐ ಅನ್ನು ಪ್ರಶ್ನಿಸಿದೆ.

ಈ ಪ್ರಕರಣದ ತನಿಖೆಗಾಗಿ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ  ಕ್ರಮವನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ಉಮೇಶ್ ಎಂ.ಅಡಿಗ ಅವರಿದ್ದ ವಿಭಾಗೀಯ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆಯ ವೇಳೆ ನ್ಯಾಯಮೂರ್ತಿ ಅಡಿಗ, ‘ಸಿಬಿಐ ಇನ್ನೂ ವಿಚಾರಣೆ ಆರಂಭಿಸಿಲ್ಲವೇ’ ಎಂದು ಪ್ರಶ್ನಿಸಿದರು. ಈ ಮಾತಿಗೆ ದನಿಗೂಡಿಸಿದ ನ್ಯಾಯಮೂರ್ತಿ ಸೋಮಶೇಖರ್ ‘ನೀವು ಎಫ್‌ಐಆರ್ ದಾಖಲಿಸಿದ್ದು ಯಾವಾಗ, ಏನು ನೀವಿನ್ನೂ 1860 ಐಪಿಸಿಯಲ್ಲೇ ಇದ್ದೀರಾ’ ಎಂದು ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರನ್ನು ಪ್ರಶ್ನಿಸಿದರು.

ADVERTISEMENT

ಇದಕ್ಕೆ ಪ್ರಸನ್ನ ಕುಮಾರ್, ‘2020ರ ಅಕ್ಟೋಬರ್ 3ರಂದೇ ಎಫ್ಐಆರ್ ದಾಖಲಿಸಲಾಗಿದೆ. ಕೋವಿಡ್‌ನಿಂದಾಗಿ ಎರಡು ವರ್ಷ ತನಿಖೆ ನಡೆಸಲು ಆಗಿಲ್ಲ. ಒಂದು ವರ್ಷ ಅರ್ಜಿದಾರರು ಪ್ರಕರಣದ ವಿಚಾರಣೆಗೆ ತಡೆ ಪಡೆದುಕೊಂಡ ಕಾರಣ ಯಾವುದೇ ಪ‍್ರಗತಿ ಆಗಿಲ್ಲ. ಇಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್‌ ಅರ್ಜಿ ಮತ್ತು ಮೇಲ್ಮನವಿ ಹಾಗೂ ಈಗಿನ ಅರ್ಜಿಯೂ ಸೇರಿದರೆ ಆರನೇ ಅರ್ಜಿಯಾಗುತ್ತದೆ. ಹೀಗಾಗಿ, ಪ್ರಕರಣದ ತನಿಖೆಯಲ್ಲಿ ಪ್ರಗತಿಯಾಗಿಲ್ಲ. ಬರೀ ಕೋರ್ಟ್‌ನಲ್ಲೇ ಅಲೆದಾಡಿಸುತ್ತಿದ್ದಾರೆ’ ಎಂದು ಆಕ್ಷೇಪಿಸಿದರು. 

ದಿನದ ಕಲಾಪ ಮುಕ್ತಾಯಗೊಂಡಿದ್ದರಿಂದ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಲಾಯಿತು. ರಾಜ್ಯ ಸರ್ಕಾರದ ಪರ ವಿಶೇಷ ಪ್ರತಿನಿಧಿಯಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಕಪಿಲ್‌ ಸಿಬಲ್‌ ಹಾಗೂ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಮತ್ತು ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಉದಯ ಹೊಳ್ಳ, ಯತ್ನಾಳ್‌ ಪರ ವೆಂಕಟೇಶ್ ಪಿ.ದಳವಾಯಿ ಹಾಜರಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.