
ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ, ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ.
ಈ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಬುಧವಾರ ವಜಾಗೊಳಿಸಿದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿ ಕೆ.ಎಸ್.ಮುದಗಲ್ ನೇತೃತ್ವದ ವಿಭಾಗೀಯ ನ್ಯಾಯಪೀಠ ತೆರೆದ ನ್ಯಾಯಾಲಯ ದಲ್ಲಿ ಉಕ್ತ ಲೇಖನದ ಮೂಲಕ ದಾಖಲಿಸಿದರು.
‘ತೀರ್ಪಿನಲ್ಲಿ ಅಲ್ಲೊಂದು ಇಲ್ಲೊಂದು ಇರುವ ಲೋಪಗಳನ್ನು ಪರಿಗಣಿಸಲಾಗದು. ಅಪರಾಧದ ಗಂಭೀರತೆ ಮತ್ತು ದಾಖಲೆಗಳನ್ನು ಪರಿಗಣಿಸಿದಾಗ ಪ್ರಜ್ವಲ್ ಬಿಡುಗಡೆ ಮಾಡುವುದು ಸೂಕ್ತವಲ್ಲ. ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲರು ಎತ್ತಿರುವ ಪ್ರಶ್ನೆಗಳನ್ನು ಅಂತಿಮ ವಿಚಾರಣೆಯ ಸಂದರ್ಭದಲ್ಲಿ ಪರಿಗಣಿಸಲಾಗುವುದು’ ಎಂದು ನ್ಯಾಯಪೀಠ ಹೇಳಿದೆ. ಅಂತಿಮ ವಿಚಾರಣೆಯನ್ನು 2026ರ ಜನವರಿ 12ಕ್ಕೆ ಮುಂದೂಡಲಾಗಿದೆ.
ಪ್ರಜ್ವಲ್ ರೇವಣ್ಣ ಪರ ಸುಪ್ರೀಂ ಕೋರ್ಟ್‌ನ ಪದಾಂಕಿತ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಮತ್ತು ಪ್ರಾಸಿಕ್ಯೂಷನ್ ಪರ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್ ಹಾಗೂ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ವಾದ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.