ADVERTISEMENT

‘ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಶಾಲೆ ಹೆಸರು ನಮೂದಿಸಿ’: ಹೈಕೋರ್ಟ್‌

ಮಾನ್ಯತೆ ಹಿಂಪಡೆದ ಶಾಲೆಗಳಿಂದ ಹೈಕೋರ್ಟ್‌ಗೆ ರಿಟ್‌ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2022, 20:18 IST
Last Updated 23 ಏಪ್ರಿಲ್ 2022, 20:18 IST
   

ಬೆಂಗಳೂರು: ‘ಶೈಕ್ಷಣಿಕ ವರ್ಷದ ಕೊನೆಯಲ್ಲಿ ಮಾನ್ಯತೆ ಹಿಂಪಡೆಯಲಾಗಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಅವರ ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಸಂಬಂಧ ವಿವೇಕನಗರದ ಶಾಂತಿನಿಕೇತನ ಪ್ರೌಢಶಾಲೆ ಸೇರಿದಂತೆ ಎಂಟು ಶಾಲೆಗಳು ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದನ್ಯಾಯಮೂರ್ತಿ ಪಿ. ಕೃಷ್ಣ ಭಟ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಅರ್ಜಿದಾರರ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಅಂಕಪಟ್ಟಿಗಳಲ್ಲಿ ಅವರ ಶಾಲೆಗಳ ಹೆಸರು ನಮೂದಿಸಲು ನಿರಾಕರಿಸುವುದು ಏಕಪಕ್ಷೀಯ ನಿರ್ಧಾರವಾಗಲಿದೆ‘ ಎಂದು ಭಿಪ್ರಾಯಪಟ್ಟಿರುವನ್ಯಾಯಪೀಠ,‘ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ಫಲಿತಾಂಶ ಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ನಿರ್ದೇಶಕರು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿಗೆ ನಿರ್ದೇಶಿಸಿದೆ.

ADVERTISEMENT

‘ಶಾಶ್ವತ ಮಾನ್ಯತೆ ಇದ್ದರೂ ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಸರ್ಕಾರವು ನಮ್ಮ ಶಾಲೆಗಳ ಮಾನ್ಯತೆ ಹಿಂಪಡೆದಿದೆ. ಹೀಗಾಗಿ, ನಮ್ಮ ಶಾಲೆಯಲ್ಲಿ ಕಲಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಲ್ಲಿ ಪರೀಕ್ಷೆ ಬರೆಸಲಾಗಿದೆ. ಇದರಿಂದ, ಪರೀಕ್ಷಾ ಫಲಿತಾಂಶ ಪಟ್ಟಿ ಹಾಗೂ ಅಂಕಪಟ್ಟಿಯಲ್ಲಿ ನಮ್ಮ ಶಾಲೆಗಳ ಹೆಸರನ್ನು ಕೈಬಿಡುವ ಸಾಧ್ಯತೆ ಇದೆ. ಆದ್ದರಿಂದ, ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು' ಎಂದು ಅರ್ಜಿದಾರರು ಕೋರದ್ದರು. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.