ADVERTISEMENT

ಅಕ್ರಮ ಆಸ್ತಿ ಗಳಿಕೆ ಆರೋಪ: ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 15:54 IST
Last Updated 11 ಜುಲೈ 2025, 15:54 IST
<div class="paragraphs"><p>ಕೆ.ಎಸ್‌. ಈಶ್ವರಪ್ಪ</p></div>

ಕೆ.ಎಸ್‌. ಈಶ್ವರಪ್ಪ

   

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ಆದೇಶಿಸಿದೆ.

ಈ ಸಂಬಂಧ ಕೆ.ಎಸ್‌.ಈಶ್ವರಪ್ಪ, ಪುತ್ರ ಕೆ.ಇ.ಕಾಂತೇಶ್‌ ಮತ್ತು ಸೊಸೆ ಶಾಲಿನಿ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ADVERTISEMENT

‘ಎಫ್‌ಐಆರ್‌ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಎಂ.ವಿನೋದ್ ಕುಮಾರ್ ವಾದ ಮಂಡಿಸಿದರು.

ಪ್ರಕರಣವೇನು?: ‘ಈಶ್ವರಪ್ಪ 2006ರಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವರಾದ ನಂತರ ಶಿವಮೊಗ್ಗದಲ್ಲಿ ತಮ್ಮ ಪುತ್ರ ಕೆ.ಇ.ಕಾಂತೇಶ್‌ ಮತ್ತು ಸೊಸೆ ಶಾಲಿನಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿ ಖರೀದಿಸಿದ್ದಾರೆ. ಈ ಮೂವರೂ ಜಂಟಿಯಾಗಿ ಹಲವು ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳು, ಆಟೋಮೊಬೈಲ್‌ ಷೋ ರೂಂಗಳ ಒಡೆತನ ಹೊಂದಿದ್ದಾರೆ. ಕೇವಲ ಮೂರೂವರೆ ವರ್ಷದಲ್ಲಿ ಇವರ ಆಸ್ತಿ ಶೇ 100 ಪಟ್ಟು ಅಧಿಕವಾಗಿದೆ’ ಎಂದು ಆರೋಪಿಸಿ ಶಿವಮೊಗ್ಗದ ವಕೀಲ ಬಿ.ವಿನೋದ್‌ 2021ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಇದರನ್ವಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 13(1)(ಡಿ) (ಅಕ್ರಮ ಸಂಪಾದನೆಗೆ ಅಧಿಕಾರ ದುರ್ಬಳಕೆ), 13(1)(ಇ), ಭಾರತೀಯ ದಂಡ ಸಂಹಿತೆ–1860ರ ಕಲಂ 420ರ (ವಂಚನೆ) ಮತ್ತು ಕಲಂ 120-ಬಿ (ಅಪರಾಧಿಕ ಒಳಸಂಚು) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ 2025ರ ಏಪ್ರಿಲ್ 5ರಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.