ADVERTISEMENT

ಮೈಸೂರು ವಿವಿ ಕುಲಪತಿ ನೇಮಕಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2023, 20:08 IST
Last Updated 21 ಜೂನ್ 2023, 20:08 IST
HIGH COURT
HIGH COURT   

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಲೋಕನಾಥ್‌ ನೇಮಕವನ್ನು ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ (ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್.ಅನಂತಮೂರ್ತಿ ಅವರ ಪುತ್ರ) ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ADVERTISEMENT

ಪ್ರತಿವಾದಿಗಳಾದ ಕುಲಾಧಿಪತಿ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಮೈಸೂರು ವಿ.ವಿ. ಶೋಧನಾ ಸಮಿತಿ ಮತ್ತು ಲೋಕನಾಥ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಹಿರಿಯ ವಕೀಲ ರವಿವರ್ಮ ಕುಮಾರ್, ‘ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿಗೆ ವಿರುದ್ಧವಾಗಿ ಲೋಕನಾಥ್‌ ಅವರನ್ನು ನೇಮಕ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆ ಸಿದ್ಧಪಡಿಸಿದ್ದ ಪಟ್ಟಿಯಲ್ಲಿ ಅವರ ಹೆಸರೇ ಇರಲಿಲ್ಲ. ವಿಶ್ವವಿದ್ಯಾಲಯದ ಕಾಯ್ದೆ ಅನ್ವಯ ನಿರ್ದಿಷ್ಟ ಅರ್ಹತೆ ಇಲ್ಲದಿದ್ದರೂ ನಿಯಮಾವಳಿ ಉಲ್ಲಂಘಿಸಿ ಲೋಕನಾಥ್‌ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ‘ ಎಂದು ಅರುಹಿದರು. 

‘ಅಂತೆಯೇ, ಸ್ಥಿರಾಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಲೋಕನಾಥ್ ಮತ್ತಿತರರ ವಿರುದ್ಧ ಮೈಸೂರಿನ ಜಯಲಕ್ಷ್ಮೀಪುರಂನ ಡಿ.ವಿ.ಶಶಿಧರ್ ಮತ್ತಿತರರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ 2020ರ ನವೆಂಬರ್ 4ರಂದು ವಂಚನೆ ಪ್ರಕರಣ ದಾಖಲಿಸಿದ್ದರು. ಈ ಕುರಿತಂತೆ ಮೈಸೂರಿನ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ. ಆದರೆ, ಲೋಕನಾಥ್‌ ಈ ವಿಷಯವನ್ನು ಮುಚ್ಚಿಟ್ಟಿದ್ದಾರೆ‘ ಎಂದು ವಿವರಿಸಿದರು. 

ಅರ್ಜಿಯಲ್ಲಿ ಏನಿದೆ?: ‘ದಾಖಲೆಗಳ ಪ್ರಕಾರ ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಲು 20 ದಿನಗಳ ಸಮಯ ನೀಡಿ 2022ರ ನವೆಂಬರ್ 8ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ 2022ರ ನವೆಂಬರ್‌ 28 ಕೊನೆಯ ದಿನವಾಗಿತ್ತು.  ಅದೇ ದಿನ ಲೋಕನಾಥ್ ತಮ್ಮ ಪ್ರಕರಣದ ವಿರುದ್ಧ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ಜತೆಗೆ 2007ರಲ್ಲಿ ನಡೆದ ಪ್ರೊಫೆಸರ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಕ ಮಾಡಲಾಗಿದ್ದ ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ರಂಗವಿಠಲಾಚಾರ್ ಆಯೋಗವು, ಯುಜಿಸಿ ನಿಯಮಗಳ ಅನುಸಾರ ಅವರು ಪ್ರೊಫೆಸರ್ ಹುದ್ದೆಗೆ ಅರ್ಹರಲ್ಲವೆಂದು ಹೇಳಿದೆ‘ ಎಂಬ ಅಂಶಗಳನ್ನು ಅರ್ಜಿಯಲ್ಲಿ ವಿವರಿಸಲಾಗಿದೆ.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.