ADVERTISEMENT

ಮಾಹಿತಿ ಹಕ್ಕು ಆಯೋಗ: ಆಯುಕ್ತರ ನೇಮಕಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 15:48 IST
Last Updated 10 ಏಪ್ರಿಲ್ 2019, 15:48 IST
   

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನಾಗಿ ಎಸ್.ಎಂ.ಸೋಮಶೇಖರ ಮತ್ತು ಕೆ.ಪಿ.ಮಂಜುನಾಥ ಅವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸರ್ಕಾರದ ಆದೇಶವನ್ನು ಪ್ರಶ್ನಿಸಿ ನಿವೃತ್ತ ಐಪಿಎಸ್‌ ಅಧಿಕಾರಿ ಮೊಹಮದ್ ವಜೀರ್ ಅಹ್ಮದ್ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಪ್ರತಿವಾದಿ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

ಪ್ರಕರಣವೇನು?: ‘ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೊದಲ ಅಧಿಸೂಚನೆಯಲ್ಲಿ ನನ್ನ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಆದರೆ, ಈ ಬಗ್ಗೆ ನ್ಯಾಯಯುತವಾಗಿ ನಡೆದುಕೊಳ್ಳದ ಸರ್ಕಾರ ಮತ್ತೊಂದು ಅಧಿಸೂಚನೆ ಹೊರಡಿಸಿ ನನ್ನ ಬದಲಿಗೆ ಸೋಮಶೇಖರ ಮತ್ತು ಮಂಜುನಾಥ ಹೆಸರನ್ನು ಶಿಫಾರಸು ಮಾಡಿತು’ ಎಂಬುದು ಅರ್ಜಿದಾರರ ಆಕ್ಷೇಪ.

ಅರ್ಜಿದಾರರು ಎರಡನೇ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆಗ ವಿಚಾರಣೆ ವೇಳೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮುಚ್ಚಳಿಕೆ ನೀಡಿ, ‘ಅರ್ಜಿದಾರರಿಗೆ ಒಂದು ಸ್ಥಾನ ಮೀಸಲು ಇರಿಸಲಾಗುವುದು’ ಎಂದು ಹೇಳಿತ್ತು. ಆದರೆ, ಈ ಮುಚ್ಚಳಿಕೆ ಅನುಸಾರ ಸರ್ಕಾರ ನಡೆದುಕೊಂಡಿಲ್ಲ’ ಎಂದು ಮೇಲ್ಮನವಿಯಲ್ಲಿ ದೂರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.