
ಶಕುಂತಲಾ ನಟರಾಜ್
ಬೆಂಗಳೂರು: ‘ಯಾದಗಿರಿ ಜಿಲ್ಲಾ ಕ್ರೀಡಾಂಗಣದ ದುರವಸ್ಥೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಲಬುರಗಿ ಜಿಲ್ಲಾ ಸಚಿವರೂ ಆದ ಪ್ರಿಯಾಂಕ ಖರ್ಗೆ ಅವರನ್ನು ಅವಮಾನಿಸುವಂತಹ ಟೀಕೆ ಪ್ರಕಟಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಮತ್ತು ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣದ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ನ್ಯಾಯಿಕ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಕರಣ ರದ್ದುಕೋರಿ ಶಕುಂತಲಾ ನಟರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಅವರಿದ್ದ ಏಕಸದಸ್ಯ ನ್ಯಾಯಪೀಠ (ಕಲಬುರಗಿ) ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಶಕುಂತಲಾ ನಟರಾಜ್ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿ, ‘ಅರ್ಜಿದಾರರ ವಿರುದ್ಧ ರಾಜಕೀಯ ದ್ವೇಷದಿಂದ ಈ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆಡಳಿತಾರೂಢ ಪಕ್ಷದ ಪದಾಧಿಕಾರಿ ಮುಖಾಂತರ ಈ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು ಇದನ್ನು ರದ್ದುಪಡಿಸಬೇಕು’ ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದಂತೆ ಕಲಬುರಗಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಪ್ರತಿವಾದಿ ರಾಜ್ಯ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.