ಬೆಂಗಳೂರು: ಸಿಹಿ ಹಂಚಿದ ನಂತರ ಕೈಯನ್ನು ರಾಷ್ಟ್ರಧ್ವಜದಿಂದ ಒರೆಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ‘ಕನ್ನಡಾಭಿಮಾನಿ ಸಂಘ’ದ ಅಧ್ಯಕ್ಷ ಎ.ಕೃಷ್ಣಪ್ಪ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸುವ ನ್ಯಾಯಿಕ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
‘ನನ್ನ ವಿರುದ್ಧ ತಿಲಕನಗರ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಎ.ಕೃಷ್ಣಪ್ಪ ಬಿನ್ ಅಣ್ಣಯ್ಯ (72) ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ, ‘ಅರ್ಜಿದಾರರಿಗೆ ರಾಷ್ಟ್ರಧ್ವಜಕ್ಕೆ ಅಪಮಾನ ಉಂಟು ಮಾಡುವಂತಹ ಯಾವುದೇ ಉದ್ದೇಶ ಇರಲಿಲ್ಲ. ಭಾರತೀಯ ಸೇನೆಯು, ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಯಶಸ್ಸು ಸಾಧಿಸಿದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿಹಿ ಹಂಚಲಾಗಿತ್ತು. ಆ ಸಂದರ್ಭದಲ್ಲಿ ಆಕಸ್ಮಿಕವಾಗಿ ಈ ಘಟನೆ ನಡೆದಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆಗೆ ತಡೆ ನೀಡಿತು. ಅಂತೆಯೇ, ಅರ್ಜಿಗೆ ಸಂಬಂಧಿಸಿದಂತೆ ತಿಲಕನಗರ ಠಾಣಾಧಿಕಾರಿ ಮತ್ತು ಪ್ರಕರಣದ ದೂರುದಾರ ಪೊಲೀಸ್ ಅಧಿಕಾರಿ ಮಂಜುನಾಥ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?: ‘ಜಯನಗರದ 4ನೇ ಹಂತದಲ್ಲಿರುವ ವಿನಾಯಕ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಳಿ ಕನ್ನಡಾಭಿಮಾನ ಸಂಘವು ಇದೇ 8 ರಂದು ಸಿಹಿ ಹಂಚಿಕೆ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ಸಿಹಿ ಹಂಚಿದ ನಂತರ ಕೃಷ್ಣಪ್ಪ ತಮ್ಮ ಕೈಯನ್ನು ರಾಷ್ಟ್ರಧ್ವಜಕ್ಕೆ ಒರೆಸಿದ್ದಾರೆ. ಆ ಮೂಲಕ ರಾಷ್ಟ್ರಧ್ವಜದ ಘನತೆ ಮತ್ತು ಗೌರವಕ್ಕೆ ಅವಮಾನ ಎಸಗಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ಮಂಜುನಾಥ್ ತಿಲಕ್ ನಗರ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣಪ್ಪ ವಿರುದ್ಧ, ರಾಷ್ಟ್ರೀಯ ಗೌರವಗಳಿಗೆ ಅಪಮಾನ ತಡೆ ಕಾಯ್ದೆ-1971ರ ಕಲಂ 2ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.