ADVERTISEMENT

ವಕೀಲರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2023, 19:54 IST
Last Updated 4 ಡಿಸೆಂಬರ್ 2023, 19:54 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಪೊಲೀಸ್‌ ಅಧಿಕಾರಿಗೆ ಜೀವ ಬೆದರಿಕೆ ಒಡ್ಡಿ ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ನಾಲ್ವರು ವಕೀಲರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

‘ನಮ್ಮ ವಿರುದ್ಧದ ಎಫ್ಐಆರ್‌ ರದ್ದುಪಡಿಸಬೇಕು‘ ಎಂದು ಕೋರಿ ಡಿ.ಬಿ.ಸುಜೇಂದ್ರ, ಎ.ಕೆ.ಭುವನೇಶ್‌, ಕೆ.ಬಿ.ನಂದೀಶ್‌ ಮತ್ತು ಎಚ್‌.ಎಂ.ಸುಧಾಕರ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ ಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಇದೇ ವೇಳೆ ವಕೀಲ ಎನ್‌.ಟಿ.ಪ್ರೀತಮ್‌ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಪ್ರತಿದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್‌ ಠಾಣಾ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್‌ ರೆಡ್ಡಿ ಮತ್ತು ಕೆ.ಎನ್‌.ಫಣೀಂದ್ರ ವಾದ ಮಂಡಿಸಿದರು. ಕರ್ನಾಟಕ ವಕೀಲರ ಪರಿಷತ್‌ ಪರವಾಗಿ ಹಿರಿಯ ವಕೀಲ ಎಸ್‌. ಬಸವರಾಜು ಹಾಜರಿದ್ದರು.

ಅರ್ಜಿಯಲ್ಲಿ ಏನಿದೆ?: ‘ಅರ್ಜಿದಾರ ವಕೀಲರು ಯಾವುದೇ ರೀತಿ ಕಾನೂನು ಉಲ್ಲಂಘನೆ ಮಾಡಿಲ್ಲ. ಅವರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ. ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ದುರುದ್ದೇಶದಿಂದ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರೇ ಕಾನೂನು ಉಲ್ಲಂಘಿಸಿದ್ದಾರೆ. ಆದ್ದರಿಂದ, ವಕೀಲರ ವಿರುದ್ಧದ ಎಫ್ಐಆರ್‌ ರದ್ದುಪಡಿಸಬೇಕು‘ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಆಗ್ರಹ: ‘ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ವಿರುದ್ಧ ಪೊಲೀಸರು ನಡೆಸಿದ ಪ್ರತಿಭಟನೆ ವೇಳೆ ತೊಡೆ ತಟ್ಟಿ ಆಕ್ರೋಶ ವ್ಯಕ್ತಪಡಿಸಿದ ಪೊಲೀಸ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು‘ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್‌ ರೆಡ್ಡಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.