ಕರ್ನಾಟಕ ಹೈಕೋರ್ಟ್
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
‘ಲೋಕಾಯುಕ್ತ ಪೊಲೀಸರು ನನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಸರ್ಫರಾಜ್ ಖಾನ್ (60) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು, ‘ದಾಳಿ ವೇಳೆ ವಶಪಡಿಸಿಕೊಂಡ ದಾಖಲೆಗಳ ಪ್ರಾಥಮಿಕ ಪರಿಶೀಲನೆ ನಡೆಸಿದಾಗ ಘೋಷಿತ ಆದಾಯಕ್ಕಿಂತ ಶೇ 131ರಷ್ಟು ಅಧಿಕ ಆಸ್ತಿ ಹೊಂದಿರುವುದು ಪತ್ತೆಯಾಗಿದೆ. ₹2.84 ಕೋಟಿ ಮೊತ್ತದ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರ್ಜಿದಾರರು ಸಲ್ಲಿಸಿರುವ ಮಾಹಿತಿಗಳನ್ನು ಗಮನಿಸಿದಾಗ ಎಲ್ಲವೂ ಆದಾಯ ತೆರಿಗೆ ಇಲಾಖೆಯಲ್ಲಿ ಘೋಷಿಸಿಕೊಂಡ ವಿವರಗಳೇ ಆಗಿವೆ. ಮೇಲಾಗಿ ಜಪ್ತಿ ಮತ್ತು ಮಹಜರು ವೇಳೆ ಯಾವುದೇ ನಗದು ಜಪ್ತಿ ಮಾಡಿರುವ ಬಗ್ಗೆ ಲೋಕಾಯುಕ್ತ ಬಳಿ ನಿಖರ ಮಾಹಿತಿ ಇಲ್ಲ. ದಾಖಲೆಗಳನ್ನು ಮಾತ್ರ ಜಪ್ತಿ ಮಾಡಲಾಗಿದೆ. ಹಾಗಾಗಿ, ಈ ಪ್ರಕರಣವನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಥವಾ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಡಿ ಪರಿಗಣಿಸಲು ಆಗದು’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿತು.
ಅಂತೆಯೇ, ಲೋಕಾಯುಕ್ತ ಪೊಲೀಸರು ಅನುಮಾನ ವ್ಯಕ್ತಪಡಿಸಿರುವ ₹2.84 ಕೋಟಿ ಬಗ್ಗೆ ಸ್ಪಷ್ಟನೆ ನೀಡಿ’ ಎಂದು ಸರ್ಫರಾಜ್ ಖಾನ್ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಿತು. ಅರ್ಜಿದಾರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 131(ಬಿ), 13(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.