ADVERTISEMENT

ಮೈಸೂರು ವಿವಿ ಕುಲಪತಿ: ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2022, 21:45 IST
Last Updated 23 ಡಿಸೆಂಬರ್ 2022, 21:45 IST
   

ಬೆಂಗಳೂರು: ‌ಮೈಸೂರು ವಿಶ್ವವಿದ್ಯಾಲಯ ಕುಲಪತಿಯ ನೇಮಕಾತಿ ಪ್ರಕ್ರಿಯೆ ಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮೈಸೂರು ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿ ಪ್ರೊ.ಎಚ್. ರಾಜಶೇಖರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಅಕ್ಕಮಹಾದೇವಿ ಹಿರೇಮಠ ಅವರು, ‘ರಾಜಶೇಖರ್ ಪ್ರಸ್ತುತ ಪ್ರಭಾರ ಕುಲಪತಿಯಾಗಿದ್ದು ಈ ಹುದ್ದೆಗೆ ಅಗತ್ಯವಾದ ಎಲ್ಲ ಅರ್ಹತೆಗಳನ್ನೂ ಹೊಂದಿದ್ದಾರೆ. ಅವರ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ ಅಥವಾ ಬಾಕಿ ಇಲ್ಲ.

ADVERTISEMENT

ಕುಲಪತಿ ನೇಮಕಕ್ಕೆ ರಚಿಸಲಾಗಿದ್ದ ಶೋಧನಾ ಸಮಿತಿಗೆ ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಸಮಿತಿಯು ಅರ್ಜಿದಾರರ ಹೆಸರನ್ನು ಪರಿಗಣಿಸದೆ ಇತರೆ ಮೂವರ ಹೆಸರುಗಳನ್ನು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದ್ದರಿಂದ, ಕುಲಪತಿ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ನೇಮಕಾತಿ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿದ್ದು, ಪ್ರತಿವಾದಿಗಳಾದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಮೈಸೂರು ವಿ.ವಿ ರಿಜಿಸ್ಟ್ರಾರ್ ಹಾಗೂ ಶೋಧನಾ ಸಮಿತಿಯ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.