ಬೆಂಗಳೂರು: ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿನ ಸರ್ಕಾರಿ ಜಮೀನುಗಳ ಒತ್ತುವರಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಮೀನಿನ ಮಾಲೀಕತ್ವ ಕುರಿತಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಎಸ್‌ಐಟಿ ನೇಮಕ ರದ್ದುಪಡಿಸುವಂತೆ ಕೋರಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕುಮಾರಸ್ವಾಮಿ ಪರ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ ಅವರ ವಾದ ಮನ್ನಿಸಿದ ನ್ಯಾಯಪೀಠ ಎಸ್ಐಟಿ ನೇಮಕ ಆದೇಶಕ್ಕೆ ಮುಂದಿನ ವಿಚಾರಣೆತನಕ ಮಧ್ಯಂತರ ತಡೆ ನೀಡಿತು. ಸರ್ಕಾರದ ಪರ ವಕೀಲರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
ಎಚ್.ಡಿ.ಕುಮಾರಸ್ವಾಮಿ ಪರ ಹೈಕೋರ್ಟ್ ವಕೀಲ ಎ.ವಿ.ನಿಶಾಂತ್ ವಕಾಲತ್ತು ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.