
ಬೆಂಗಳೂರು: ‘ಸಾಕ್ಷಿಗಳನ್ನು ತಿರುಚುವುದಿಲ್ಲ, ನ್ಯಾಯಾಲಯ ವಿಧಿಸುವ ಎಲ್ಲ ಷರತ್ತುಗಳಿಗೆ ಬದ್ಧವಾಗಿರುತ್ತೇನೆ ಎಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟಿದ್ದ ವಿನಯ್ ಕುಲಕರ್ಣಿ ಅದನ್ನು ಉಲ್ಲಂಘಿಸಿದ್ದಾರೆ’ ಎಂದು ಸಿಬಿಐ ಹೈಕೋರ್ಟ್‌ಗೆ ಅರುಹಿತು.
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ‘ಈ ಪ್ರಕರಣದಲ್ಲಿ ಇನ್ನೂ ಮೂರು ಸಾಕ್ಷಿಗಳ ವಿಚಾರಣೆ ನಡೆಯಬೇಕಿದೆ’ ಎಂಬ ಮಾಹಿತಿಯನ್ನು ಒಳಗೊಂಡ ಮೆಮೊ ಅನ್ನು ನ್ಯಾಯಪೀಠಕ್ಕೆ ಸಲ್ಲಿಸಿ, ‘ಷರತ್ತು ಉಲ್ಲಂಘಿಸಿದ ಕಾರಣಕ್ಕೆ ಜಾಮೀನು ರದ್ದುಪಡಿಸಿದ ಬಳಿಕ ಏನಾಗಲಿದೆ ಎಂಬ ಅಂಶಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ತೀರ್ಪುಗಳಿಲ್ಲ’ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರಕರಣದಲ್ಲಿ ಎಲ್ಲಾ ಸಾಕ್ಷಿಗಳು ಪ್ರತಿಕೂಲವಾಗಿದ್ದಾವೆಯೇ’ ಎಂದು ಪ್ರಶ್ನಿಸಿತು. ಇದಕ್ಕೆ ಪ್ರಸನ್ನ ಕುಮಾರ್, ‘ಎಲ್ಲರೂ ಅಲ್ಲ. ಕೆಲವರು ಬೆಂಬಲಿಸಿದ್ದಾರೆ ಮತ್ತು ಕೆಲವರು ವಿರುದ್ಧವಾಗಿದ್ದಾರೆ’ ಎಂದು ಉತ್ತರಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ (ಜ.09) ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.