ADVERTISEMENT

ಸ್ಮಶಾನಕ್ಕೆ ಜಾಗ ಕೊಡದಿದ್ದರೆ ನ್ಯಾಯಾಂಗ ನಿಂದನೆ ಕ್ರಮ: ಹೈಕೋರ್ಟ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 7:14 IST
Last Updated 1 ಜುಲೈ 2022, 7:14 IST
ಹೈಕೋರ್ಟ್‌
ಹೈಕೋರ್ಟ್‌    

ಬೆಂಗಳೂರು: ಸ್ಮಶಾನಕ್ಕೆ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಜಮೀನು ಒದಗಿಸುವಂತೆ ಸೂಚಿಸಿರುವ ಆದೇಶ ಪಾಲಿಸದ ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ.

ನಗರದ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಸರ್ಕಾರದ ವಿಳಂಬ ಧೋರಣೆಗೆ ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿ ಬಿ. ವೀರಪ್ಪ, ‘ಸಮರೋಪಾದಿಯಲ್ಲಿ ಸ್ಮಶಾನಕ್ಕೆ ಜಾಗ ಕಲ್ಪಿಸುವ ಕೆಲಸ ಮಾಡಿದರೆ ಸರ್ಕಾರಕ್ಕೆ ಪರೋಕ್ಷವಾಗಿ ಅನುಕೂಲವಾಗುತ್ತದೆ. ಒಂದು ವೇಳೆ ಚುನಾವಣೆ ನೀತಿ ಸಂಹಿತೆ ಜಾರಿಯಾದರೆ ಇದು ಕಷ್ಟವಾಗುತ್ತದೆ’ ಎಂದು ಹೇಳಿದರು.

ADVERTISEMENT

ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್. ಸುಬ್ರಹ್ಮಣ್ಯ ‘ಬಹಳಷ್ಟು ಕಡೆ ಸ್ಮಶಾನಕ್ಕೆ ಈಗಾಗಲೇ ಜಾಗ ನೀಡಲಾಗಿದೆ. ಕೆಲವೆಡೆ ಸರ್ಕಾರಿ ಜಮೀನು ಲಭ್ಯವಿಲ್ಲ. ಖರಾಬು ಭೂಮಿಯಿದ್ದರೂ ಅದನ್ನು ನೀಡಲಾಗದು. ಭೂಮಿ ಖರೀದಿ ಮಾಡಿ ಸ್ಮಶಾನಕ್ಕೆ ಜಾಗ ಒದಗಿಸಬೇಕಿದೆ. ಹಾಗಾಗಿ,ಅರ್ಜಿ ಸಂಬಂಧ ಹೈಕೋರ್ಟ್‌ ನೀಡಿರುವ ಆದೇಶ ಪಾಲನೆಗೆ ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಇದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ವೀರಪ್ಪ ಅವರು, ‘ನ್ಯಾಯಾಲಯ ಯಾವುದೇ ಅಧಿಕಾರಿ ಅಥವಾ ಸರ್ಕಾರದ ವಿರುದ್ಧವಿಲ್ಲ. ನಮಗೆ ಯಾರ ಮೇಲೆ ಸಿಟ್ಟೂ ಇಲ್ಲ. ಕೋರ್ಟ್ ಆದೇಶ ಉಲ್ಲಂಘಿಸಿದರೆ ಸಹಿಸಲಾಗದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.