ADVERTISEMENT

ಹಿಜಾಬ್ ವಿವಾದ: ಕಾಂಗ್ರೆಸ್‌ನಲ್ಲಿ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ –ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಫೆಬ್ರುವರಿ 2022, 12:19 IST
Last Updated 15 ಫೆಬ್ರುವರಿ 2022, 12:19 IST
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್   

ಬೆಂಗಳೂರು: ‘ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶಕ್ಕೆ ಕಿಮ್ಮತ್ತಿಲ್ಲವೇ’ ಎಂದು ಬಿಜೆಪಿ ಪ್ರಶ್ನಿಸಿದೆ.

ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಬಾರದು ಎಂದು ಜಮೀರ್ ಅವರಿಗೆ ಡಿಕೆಶಿ ಕಟ್ಟಪ್ಪಣೆ ನೀಡಿದ್ದರು. ಆದರೆ, ಸಿದ್ದರಾಮಯ್ಯ ಅವರು ಪಕ್ಷದ ವೇದಿಕೆಯಲ್ಲೇ ಹಿಜಾಬ್ ಸಭೆ ಕರೆದಿದ್ದಾರೆ. ಅದಕ್ಕೆ ಜಮೀರ್ ಅವರನ್ನೂ ಆಹ್ವಾನಿಸಿದ್ದಾರೆ. ಹಾಗಾದರೆ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ? ಎಂದು #ಕಾಂಗ್ರೆಸ್‌ಕಲಹ ಎಂಬ ಹ್ಯಾಷ್‌ಟ್ಯಾಗ್‌ ಉಲ್ಲೇಖಿಸಿ ವಾಗ್ದಾಳಿ ನಡೆಸಿದೆ.

‘ಹಿಜಾಬ್ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಹಿಜಾಬ್ ಬಗ್ಗೆ ಯಾರೂ ಮಾತನಾಡಬಾರದು ಎಂಬ ಡಿ.ಕೆ.ಶಿವಕುಮಾರ್‌ ಆದೇಶಕ್ಕೆ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಅಸಮರ್ಥ ರಾಜ್ಯಾಧ್ಯಕ್ಷ ಡಿಕೆಶಿ ಅವರೀಗ ಹತಾಶೆಗೆ ಬಿದ್ದಿದ್ದಾರೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಹಿಜಾಬ್ ವಿಚಾರ‌ಕ್ಕೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ವಿಚಾರಣೆ ಮುಂದುವರಿದಿದ್ದು, ಎಲ್ಲರ ಚಿತ್ತ ಕೋರ್ಟ್ ತೀರ್ಪಿನತ್ತ ನೆಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.