ಬೆಂಗಳೂರು: ಹಿಜಾಬ್ ಹೆಸರಿನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸುವುದು ಸಂಘ ಪರಿವಾರದ ಮುಖ್ಯ ಅಜೆಂಡಾ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಹಿಜಾಬ್ ಹೆಸರಿನಲ್ಲಿ ರಾಜ್ಯದಾದ್ಯಂತ ಕೋಮು ಸಂಘರ್ಷ ಸೃಷ್ಟಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿವೆ. ಇದಕ್ಕೆ ತಕ್ಷಣ ಕಡಿವಾಣ ಹಾಕಿ ಜನರನ್ನು ಪ್ರಚೋದಿಸುವ ವ್ಯಕ್ತಿಗಳನ್ನು ಬಂಧಿಸಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲಿ ಒತ್ತಾಯಿಸುತ್ತೇನೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
‘ಹಿಜಾಬ್ ಹೆಸರಿನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸುವುದು ಸಂಘ ಪರಿವಾರದ ಮುಖ್ಯ ಅಜೆಂಡಾ. ಪ್ರಧಾನಿ ಮೋದಿ ಬೇಟಿ ಬಚಾವೋ, ಬೇಟಿ ಪಡಾವೋ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಈ ಘಟನೆಯ ಬಗ್ಗೆ ಅರಿವಿಲ್ಲವೇ?’ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.
‘ಯಾವುದೇ ಧರ್ಮವನ್ನು ಆಚರಿಸುವ ಹಕ್ಕನ್ನು ಸಂವಿಧಾನವು ನೀಡಿದೆ. ಅಂದರೆ ಅವರವರ ಧರ್ಮದ ಪ್ರಕಾರ ಜನರು ಯಾವುದೇ ಬಟ್ಟೆಯನ್ನು ಧರಿಸಬಹುದು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರ ಶಾಲೆ ಪ್ರವೇಶವನ್ನು ನಿಷೇಧಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.