ADVERTISEMENT

ಪ್ರತಿಭಟನೆ, ಸಮಾವೇಶ ಬೇಡ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2019, 20:35 IST
Last Updated 31 ಡಿಸೆಂಬರ್ 2019, 20:35 IST
ಶಾಂತಿಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇದ್ದರು.– ಪ್ರಜಾವಾಣಿ ಚಿತ್ರ
ಶಾಂತಿಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇದ್ದರು.– ಪ್ರಜಾವಾಣಿ ಚಿತ್ರ   

ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಮುಸ್ಲಿಂ ಸೆಂಟ್ರಲ್ ಕಮಿಟಿ ಜನವರಿ 4ರಂದು ಹಮ್ಮಿಕೊಂಡಿರುವ ಪ್ರತಿಭಟನೆ ಮತ್ತು ಜ.12ರಂದು ಬಿಜೆಪಿ ವತಿಯಿಂದ ನಡೆಸಲು ಉದ್ದೇಶಿಸಿರುವ ಜನಜಾಗೃತಿ ಸಮಾವೇಶವನ್ನು ಮುಂದೂಡುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಡಿಸೆಂಬರ್ 19ರಂದು ನಡೆದ ಗಲಭೆ ಮತ್ತು ಗೋಲಿಬಾರ್ ನಂತರ ಉಂಟಾಗಿರುವ ಬಿಗುವಿನ ಪರಿಸ್ಥಿತಿಯನ್ನು ತಿಳಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಂಘಟನೆಗಳ ಪ್ರಮುಖರೊಂದಿಗೆ ಗೃಹ ಸಚಿವರು ಶಾಂತಿ ಸಭೆ ನಡೆಸಿದರು.

ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಬೊಮ್ಮಾಯಿ, ‘ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಅಸಹಕಾರ ಚಳವಳಿ ಹೆಸರಿನಲ್ಲಿ ಸಿಎಎ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆ ಮತ್ತು ಬಿಜೆಪಿ ನಡೆಸಲು ಉದ್ದೇಶಿಸಿರುವ ಜನಜಾಗೃತಿ ಸಮಾವೇಶವನ್ನು ಹತ್ತು ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಿದ್ದೇನೆ. ಎರಡೂ ಕಡೆಯ ಮುಖಂಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ' ಎಂದರು.

ADVERTISEMENT

ಪರಿಹಾರ ರದ್ದು ಮಾಡಿಲ್ಲ: ಗೋಲಿಬಾರ್‌ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಪರಿಹಾರವನ್ನು ರದ್ದು ಮಾಡಿಲ್ಲ. ತಡೆಹಿಡಿಯಲಾಗಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಗೋಲಿಬಾರ್‌ನಂತಹ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಿಸುವ ಸಂಬಂಧ ಸ್ಪಷ್ಟವಾದ ನೀತಿಯೊಂದನ್ನು ರೂಪಿಸಬೇಕೆಂಬ ಸಲಹೆ ಸಭೆಯಲ್ಲಿ ಬಂದಿದೆ. ಈ ಕುರಿತು ಅಧಿಕಾರಿಗಳ ಜೊತೆ ಸಮಾಲೋಚಿಸಿ, ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದು ಅವರು ಹೇಳಿದರು.

ಗೋಲಿಬಾರ್ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣೆ ಆರಂಭವಾಗಿದೆ. ಗುಂಡೇಟಿನಿಂದ ಇಬ್ಬರು ಮೃತಪಟ್ಟಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗುವುದು. ಈ ಸಂಬಂಧ ಸಿಐಡಿ ಡಿಜಿಪಿಗೆ ಸೂಚನೆ ನೀಡಿದ್ದು, ಅವರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

ಹಿಂಸೆಗೆ ಪ್ರಚೋದನೆ: ಯುವಕನ ಬಂಧನ
ಡಿ.19ರ ಗಲಭೆ ಮತ್ತು ಗೋಲಿಬಾರ್‌ ನಂತರ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಳ್ಳುವಂತೆ ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ನಿವಾಸಿ ಮೊಹಿದೀನ್‌ ಹಮೀಜ್‌ ಎಂಬ ಯುವಕನನ್ನು ಸೈಬರ್‌ ಅಪರಾಧ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

‘ಈತ ಪೊಲೀಸರ ಮೇಲೆ ದಾಳಿ ಮಾಡಿ, ರಕ್ತಪಾತ ನಡೆಸುವಂತೆ ಪ್ರಚೋದಿಸುವ ಪೋಸ್ಟ್‌ಗಳನ್ನು ಹಾಕಿದ್ದ. ಪ್ರಕರಣ ದಾಖಲಿಸಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ ಬಳಿಕವೂ ಕೃತ್ಯ ಮುಂದುವರಿಸಿದ್ದ. ವಶಕ್ಕೆ ಪಡೆದು, ವಿಚಾರಣೆ ನಡೆಸಿ ಬಂಧಿಸಲಾಗಿದೆ’ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.