ಜಿ. ಪರಮೇಶ್ವರ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಲು ಅನುಮತಿ ನೀಡುವ ಸಂಬಂಧ ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ನ್ಯಾಯಮೂರ್ತಿ ಮೈಕಲ್ ಕುನ್ಹಾ ಸಮಿತಿ ವರದಿಯ ಶಿಫಾರಸುಗಳು ಅನುಷ್ಠಾನ ಆಗಿದೆಯೇ ಎಂಬುದರ ಪರಿಶೀಲನೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಆ ಸಮಿತಿ ಈಗಾಗಲೇ ಪರಿಶೀಲನೆ ನಡೆಸಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಕುನ್ಹಾ ಸಮಿತಿ ವರದಿಯ ಶಿಫಾರಸು ಆಧರಿಸಿ ಏನೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದನ್ನು ಪರಿಶೀಲಿಸಿ ಅನುಮತಿ ನೀಡುವ ಕುರಿತು ತೀರ್ಮಾನಿಸಲಾಗುವುದು. ಅಲ್ಪಾವಧಿಯ ಕ್ರಮಗಳ ಪರಿಶೀಲನೆಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದ ಸಮಿತಿ ಈಗಾಗಲೇ ಎರಡು ಬಾರಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಲ್ಪಾವಧಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸಮಾಧಾನ ಎನಿಸಿದರೆ ಅನುಮತಿ ನೀಡುತ್ತೇವೆ. ಇಲ್ಲವಾದರೆ ನೀಡುವುದಿಲ್ಲ ಎಂದು ಪರಮೇಶ್ವರ ಹೇಳಿದರು.
ಕಾಲ್ತುಳಿತದಲ್ಲಿ ಅಮಾನತು ಆಗಿದ್ದ ಪೊಲೀಸ್ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.