ಸಿದ್ದರಾಮಯ್ಯ
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ರಚಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ ಮಾಡಿರುವ ಅವರು, ‘ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕಡಿವಾಣ ಹಾಕಲು ಹಾಗೂ ಜನರಲ್ಲಿ ಕಾನೂನಿನ ಅರಿವು ಮೂಡಿಸಲು ವಿಶೇಷ ಕಾನೂನು ರಚಿಸಲಾಗುವುದು. ಈ ಕುರಿತು ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು’ ಎಂದಿದ್ದಾರೆ.
‘ಇನಾಂ ವೀರಾಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ದೌರ್ಜನ್ಯ ಪ್ರಕರಣ ಆಗಿರುವುದರಿಂದ 60 ದಿನಗಳ ಒಳಗೆ ದೋಷರೋಪ ಪಟ್ಟಿ ಸಲ್ಲಿಸಬೇಕು. ಹೀಗಾಗಿ, ಖಾಸಗಿ ವಕೀಲರನ್ನು ನೇಮಕ ಮಾಡಿಕೊಳ್ಳಲಾಗುವುದು. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಆದ್ಯತೆ’ ಎಂದೂ ತಿಳಿಸಿದ್ದಾರೆ.
‘ಹೆಣ್ಣು ಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ - ಹಲ್ಲೆ, ಮರ್ಯಾದಾಗೇಡು ಹತ್ಯೆಯಂಥ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂಥ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.