ADVERTISEMENT

ಹುಕ್ಕಾ ನಿಷೇಧ ಎತ್ತಿ ಹಿಡಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2024, 15:28 IST
Last Updated 22 ಏಪ್ರಿಲ್ 2024, 15:28 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಬಹುಕೋಟಿ ಮೊತ್ತದ ವಹಿವಾಟು ಹೊಂದಿದೆ’ ಎಂದೇ ಅಂದಾಜಿಸಲಾಗಿರುವ ಹುಕ್ಕಾ ಮತ್ತು ಹುಕ್ಕಾ ಬಾರ್‌ಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿದ್ದ ಎಲ್ಲ ರಿ‌ಟ್‌ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿ ಮಹತ್ವದ ತೀರ್ಪು ನೀಡಿದೆ.

ಈ ಸಂಬಂಧ ಆರ್.ಭರತ್ ಸೇರಿದಂತೆ ಹತ್ತಕ್ಕೂ ಹೆಚ್ಚು ಅರ್ಜಿದಾರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.

‘ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯ್ದೆ–2003 (ಸಿಒಟಿಪಿ ಕಾಯ್ದೆ ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಹುಕ್ಕಾ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ‘ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ನ್ಯಾಯಪೀಠ ತಳ್ಳಿ ಹಾಕಿದೆ.

ADVERTISEMENT

‘ಸಿಒಟಿಪಿಎ ಸಿಗರೇಟುಗಳಿಗೆ ಸಂಬಂಧಿಸಿ ಕಾಯ್ದೆಯಾಗಿದ್ದು, ಹುಕ್ಕಾಗೂ ಇದಕ್ಕೂ ಸಂಬಂಧವಿಲ್ಲ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹುಕ್ಕಾಕ್ಕೆ ನಿಷೇಧ ವಿಧಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಸಂವಿಧಾನದ 47ನೇ ವಿಧಿಯ ಅನ್ವಯ ಸಾರ್ವಜನಿಕ ಆರೋಗ್ಯ ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳುವ ಹೊಣೆಗಾರಿಕೆ ಹೊಂದಿದೆ’ ಎಂಬ ರಾಜ್ಯ ಸರ್ಕಾರದ ಪರ, ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಅವರ ಪ್ರತಿವಾದವನ್ನು ನ್ಯಾಯಪೀಠ ಎತ್ತಿ ಹಿಡಿದಿದೆ.

‘ಒಂದು ದಂ ಹುಕ್ಕಾ ಸೇವನೆ 10 ಸಿಗರೇಟುಗಳನ್ನು ಸೇದಿದಷ್ಟೇ ಅಪಾಯ’ ಎಂಬ ಅಂಶದ ಮೇಲೆ ಬೆಳಕು ಚೆಲ್ಲಿರುವ ನ್ಯಾಯಪೀಠ, ‘ತಂಬಾಕು ಉತ್ಪನ್ನ ಬಳಸದ ಹರ್ಬಲ್ ಹುಕ್ಕಾ ಸೇದಲು ನಿಷೇಧ ಹೇರಬಾರದು’ ಎಂಬ ಅರ್ಜಿದಾರರ ವಾದವನ್ನು ಸಾರಾಸಗಟಾಗಿ ತಳ್ಳಿ ಹಾಕಿದೆ.  ‘ರಾಜ್ಯದಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದಿಂದ ಹುಕ್ಕಾ ವಹಿವಾಟು ನಡೆಯುತ್ತಿದೆ. ತಂಬಾಕು ಉತ್ಪಾದಕರು ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಾರೆ. ಆದರೆ, ಹುಕ್ಕಾ ವಹಿವಾಟು ನಡೆಸುವವರು ಯಾವುದೇ ತೆರಿಗೆ ಪಾವತಿಸುವುದಿಲ್ಲ’ ಎಂಬ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿದ ವಕೀಲರ ವಾದವನ್ನು ಮನ್ನಿಸಿದೆ.

ಸರ್ಕಾರದ ಆದೇಶದಲ್ಲಿ ಏನಿತ್ತು?: ‘ಹುಕ್ಕಾ, ತಂಬಾಕು ಅಥವಾ ನಿಕೊಟಿನ್ ಒಳಗೊಂಡ ನಿಕೊಟಿನ್ ರಹಿತ, ತಂಬಾಕು ರಹಿತ, ಸ್ವಾದಭರಿತ, ಸ್ವಾದರಹಿತ ಹುಕ್ಕಾ ಕಾಕಂಬಿ ಹಾಗೂ ಇದೇ ಮಾದರಿಯ ಇನ್ನಿತರ ಹೆಸರುಗಳಿಂದ ಕರೆಯಲಾಗುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ಸಿಒಟಿಪಿ ಕಾಯ್ದೆ, ಮಕ್ಕಳ ಆರೈಕೆ ಮತ್ತು ರಕ್ಷಣೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಅಗ್ನಿ ನಿಯಂತ್ರಣ ಹಾಗೂ ಅಗ್ನಿಸುರಕ್ಷತೆ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2024ರ ಫೆಬ್ರುವರಿ 7ರಂದು ಅಧಿಸೂಚನೆ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.