ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇದೇ 18ರಿಂದ 20ರವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮೂರು ದಿನಗಳು ಬಿಸಿ ಗಾಳಿಯ ಪರಿಸ್ಥಿತಿ ಹೆಚ್ಚಾಗಿ ಇರುವ ಸಂಭವವಿದೆ. ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಆದ್ದರಿಂದ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್‌ವರೆಗೂ ಹೆಚ್ಚಳವಾಗಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 4 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಸೋಮವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಮಡಿಕೇರಿ: ತಾಲ್ಲೂಕಿನ ಕೆಲವೆಡೆ ಭಾನುವಾರ ಆಲಿಕಲ್ಲು, ಗುಡುಗು ಸಹಿತ ಮಳೆಯಾಗಿ, ತಂಪೆರೆಯಿತು.
ಭಾಗಮಂಡಲ, ಬೆಂಗೂರು, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ ಮೊದಲಾದ ಗ್ರಾಮಗಳಲ್ಲಿ ಮಳೆ ಬಿದ್ದಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.