ಎಚ್.ಎಸ್ ವೆಂಕಟೇಶಮೂರ್ತಿ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ (80) ಅವರು ಶುಕ್ರವಾರ ಮುಂಜಾನೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲ ತಿಂಗಳಿಂದ ಅವರು ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಆರೋಗ್ಯ ಮತ್ತಷ್ಟು ಬಿಗಡಾಯಿಸಿದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿತ್ತು. ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಅವರು ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ.
ವೆಂಕಟೇಶಮೂರ್ತಿ ಅವರ ಪಾರ್ಥಿವ ಶರೀರದ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ವ್ಯವಸ್ಥೆ ಮಾಡಲಾಗಿತ್ತು. ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಕ್ಷೇತ್ರಗಳ ಪ್ರಮುಖರು ಅಗಲಿದ ಕವಿಗೆ ಅಂತಿಮ ನಮನ ಸಲ್ಲಿಸಿದರು. ಅವರು ರಚಿಸಿದ ಭಾವಗೀತೆಗಳನ್ನು ಹಾಡುವ ಮೂಲಕ ಗೀತ ಗೌರವವನ್ನೂ ಸಲ್ಲಿಸಲಾಯಿತು. ಬಳಿಕ, ಮೃತ ದೇಹವನ್ನು ಹೊಸಕೆರೆಹಳ್ಳಿಯ ಪುಷ್ಪಗಿರಿ ನಗರದಲ್ಲಿರುವ ಅವರ ಸ್ವಗೃಹಕ್ಕೆ ಕೊಂಡೊಯ್ಯಲಾಯಿತು.
ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಚಾಮರಾಜಪೇಟೆಯ ಟಿ.ಆರ್.ಮಿಲ್ ಚಿತಾಗಾರದಲ್ಲಿ ಶನಿವಾರ ಬೆಳಿಗ್ಗೆ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ ವೆಂಕಟೇಶಮೂರ್ತಿ ಅವರು, 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ಮೂರು ದಶಕಗಳ ಕಾಲ ಅಲ್ಲಿ ಕಾರ್ಯನಿರ್ವಹಿಸಿದ ಅವರು, ಇದೇ ಕಾಲೇಜಿನಲ್ಲಿ 2000 ನೆ ಇಸವಿಯಲ್ಲಿ ನಿವೃತ್ತರಾಗಿದ್ದರು.
‘ಎಚ್ಚೆಸ್ವಿ’ ಎಂದೇ ಸಾಹಿತ್ಯ ಕ್ಷೇತ್ರದಲ್ಲಿ ಚಿರಪರಿಚಿತರಾದ ಅವರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿ ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಚಲನಚಿತ್ರ ಹಾಗೂ ಕಿರುತೆರೆ ಧಾರಾವಾಹಿಗಳಿಗೂ ಗೀತೆಗಳನ್ನು ಬರೆದಿದ್ದಾರೆ.
ಅವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ’ ಕಾವ್ಯ ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ‘ಅನುವಾದ ಪುರಸ್ಕಾರ’ ಪಡೆದಿದೆ. ‘ಕ್ರಿಯಾಪರ್ವ’, ‘ಎಷ್ಟೊಂದು ಮುಗಿಲು’, ‘ನದೀತೀರದಲ್ಲಿ’, ‘ಉತ್ತರಾಯಣ’ ಮೊದಲಾದವು ಅವರ ಪ್ರಮುಖ ಕಾವ್ಯ ಕೃತಿಗಳಾಗಿವೆ. ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ’, ‘ಮಂಥರೆ’ ಮೊದಲಾದವು ಅವರ ಪ್ರಮುಖ ನಾಟಕಗಳು.
ಕಲಬುರಗಿಯಲ್ಲಿ ನಡೆದ 85ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಅವರಿಗೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿ ವಿವಿಧ ಪುರಸ್ಕಾರಗಳು ಸಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.