ADVERTISEMENT

ಯಡಿಯೂರಪ್ಪ ಬಾಲಿಶ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ: ಕುಮಾರಸ್ವಾಮಿ

ಬಿಎಸ್‌ವೈ ಪ್ರಮಾಣ ಪತ್ರ ಬೇಕಿಲ್ಲ: ಸಿಎಂ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2018, 6:39 IST
Last Updated 10 ಡಿಸೆಂಬರ್ 2018, 6:39 IST
ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗೌರವವಂದನೆ ಸ್ವೀಕರಿಸಿದರು.
ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗೌರವವಂದನೆ ಸ್ವೀಕರಿಸಿದರು.   

ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೀಡುವ ಬಾಲಿಶ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ವಿಧಾನ ಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ಮುಖ್ಯಮಂತ್ರಿ ಶೋಕಿಲಾಲ, ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಉಳಿಯದೇ ಹೊರಗಡೆ ವಾಸ್ತವ್ಯ ಹೂಡುತ್ತಿದ್ದಾರೆ. ಭತ್ತ ಕೊಯ್ಯಲು ಅವರನ್ನು ಮುಖ್ಯಮಂತ್ರಿ ಮಾಡಿಲ್ಲ’ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಅವರ ಪ್ರಮಾಣಪತ್ರ ನನಗೆ ಬೇಕಿಲ್ಲ. ಜನರು ನಿರ್ಧರಿಸುತ್ತಾರೆ. ರಾಜ್ಯದ ಹಿತಕ್ಕೆ ಸಂಬಂಧಿಸಿದ ವಿಷಯಗಳಿದ್ದರೆ ಮಾತ್ರ ಯಡಿಯೂರಪ್ಪ ಮಾತುಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.

ADVERTISEMENT

ಅಧಿವೇಶನ ಚೆನ್ನಾಗಿ ನಡೆಯಬೇಕು ಎನ್ನುವುದು ನಮ್ಮ ಬಯಕೆ. ಇದಕ್ಕಾಗಿಯೇ ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಬಿಜೆಪಿಯವರು ಒಳ್ಳೆಯ ವಿಷಯಗಳ ಬಗ್ಗೆ ಚರ್ಚಿಸಲಿ ಎಂದರು.

ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಸಂಪೂರ್ಣ ಅಧಿಕಾರ ಇದೆ. ಮಾಡಲಿ ಬಿಡಿ ಎಂದರು.

ಅಧಿವೇಶನದ ನಂತರ ಸರ್ಕಾರ ಬೀಳಿಸಿ ಆಂದೋಲನ ನಡೆಸುವುದಾಗಿ ಯಡಿಯೂರಪ್ಪ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಪೂರ್ಣವಾಗಿ ಸ್ವಾಗತಿಸುತ್ತೇನೆ ಎಂದರು.

ಶಿವಕುಮಾರ ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳನ್ನು ಶಾಸಕರಾದ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್, ಜೆಡಿಎಸ್ ಮುಖಂಡರಾದ ಎನ್.ಎಚ್. ಕೋನರೆಡ್ಡಿ, ಶಂಕರ ಮಾಡಲಗಿ ಹಾಗೂ ಅಧಿಕಾರಿಗಳು ಬರಮಾಡಿಕೊಂಡರು. ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಜರಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.