ಹೈಕೋರ್ಟ್
ಬೆಂಗಳೂರು: ರಸ್ತೆಯಲ್ಲಿ ನಡೆದ ಜಗಳಕ್ಕೆ ಕನ್ನಡ ಭಾಷೆಯ ತಳುಕು ಹಾಕಿ, ವಿಡಿಯೊ ಮಾಡಿ ಹರಿಬಿಟ್ಟಿದ್ದ ಪಶ್ಚಿಮ ಬಂಗಾಳದ ಭಾರತೀಯ ವಾಯು ಪಡೆ (ಐಎಎಫ್) ಅಧಿಕಾರಿ ಶಿಲಾದಿತ್ಯ ಬೋಸ್ ವಿರುದ್ಧ ದಾಖಲಾಗಿದ್ದ ಕೊಲೆ ಯತ್ನ ಆರೋಪದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಸಂಬಂಧ ಬೈಯಪ್ಪನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಮತ್ತು ಈ ಸಂಬಂಧ 10ನೇ ಎಸಿಎಂಎಂ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶಿಲಾದಿತ್ಯ ಬೋಸ್ ಹಾಗೂ ವಿಕಾಸ್ ಕುಮಾರ್ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
ಘಟನೆಗೆ ಸಂಬಂಧಿಸಿದಂತೆ ಪರಸ್ಪರ ದೂರು-ಪ್ರತಿದೂರು ದಾಖಲಿಸಿದ್ದ ವಿಕಾಸ್ ಕುಮಾರ್ ಹಾಗೂ ಮಧುಮಿತಾ ದತ್ತಾ (ಶಿಲಾದಿತ್ಯ ಪತ್ನಿ) ಕೋರ್ಟ್‌ಗೆ ಹಾಜರಾಗಿ, ‘ರಸ್ತೆಯಲ್ಲಿ ನಡೆದ ಜಗಳದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಚಕಮಕಿ ಆಗಿತ್ತೇ ಹೊರತು ಯಾವುದೇ ರೀತಿಯ ದೈಹಿಕ ಹಲ್ಲೆ ನಡೆದಿಲ್ಲ. ಪ್ರಕರಣ ಸೌಹಾರ್ದವಾಗಿ ಬಗೆಹರಿದಿದೆ. ಆದ್ದರಿಂದ, ಪ್ರಕರಣ ಮುಕ್ತಾಯಗೊಳಿಸಿಕೊಳ್ಳಲು ನಾವು ಸಿದ್ಧವಿದ್ದು, ದೂರಿನಲ್ಲಿರುವ ಎಲ್ಲ ಆರೋಪಗಳನ್ನು ಹಿಂಪಡೆಯುತ್ತಿದ್ದೇವೆ’ ಎಂದು ಪ್ರಮಾಣಪತ್ರ ಸಲ್ಲಿಸಿದ್ದರು.
ಸ್ವಇಚ್ಛೆಯಿಂದ ಸಲ್ಲಿಸಲಾದ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಿರುವ ನ್ಯಾಯಪೀಠ, ‘ಭವಿಷ್ಯದಲ್ಲಿ ಇಂತಹ ಕೃತ್ಯಗಳಲ್ಲಿ ಇಬ್ಬರೂ ಭಾಗಿಯಾಗಬಾರದು’ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಇಬ್ಬರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.
Cut-off box - ಎಂಜಿನಿಯರ್ ಹುದ್ದೆ ನೇಮಕಾತಿ ಪ್ರಶ್ನೆ: ನೋಟಿಸ್ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿನ 92 ಸಹಾಯಕ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ ಆಧರಿಸಿ ಈ ನೇಮಕಾತಿ ಮಾಡಲಾಗುತ್ತಿದೆ. ಈ ಸಂಬಂಧ ತಿಪಟೂರಿನ ಎಚ್.ಆರ್.ಸಾಗರ್ ಮೈಸೂರಿನ ಡಿ.ಪ್ರಜ್ವಲ್ ಕುಮಾರ್ ಮತ್ತು ಜಿ.ಎಂ.ಪುರುಷೋತ್ತಮ ಗೌಡ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಇದೇ ವೇಳೆ ‘ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು. ಆದರೆ ನ್ಯಾಯಾಲಯದ ಅನುಮತಿಯಿಲ್ಲದೆ ಅಂತಿಮ ಫಲಿತಾಂಶ ಪ್ರಕಟಿಸುವಂತಿಲ್ಲ’ ಎಂದು ನ್ಯಾಯಪೀಠ ನಿರ್ದೇಶಿಸಿದೆ. ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕೆಪಿಎಸ್‌ಸಿ ಕಾರ್ಯದರ್ಶಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.