ಬೆಂಗಳೂರು: ಕೊಡಗಿನ ‘ಕನ್ನಡ ಮಠ’ದ ವ್ಯಾಪ್ತಿಗೆ ಒಳಪಟ್ಟ ‘ದೇವಸ್ಥಾನಗಳ ದೈನಂದಿನ ಕಾರ್ಯನಿರ್ವಹಣೆಗೆ ತಸ್ತೀಕ್ ಪಾವತಿಸುವ ಬಗ್ಗೆ ಹೈಕೋರ್ಟ್ ಹೊರಡಿಸಿದ್ದ ಆದೇಶ ಪಾಲಿಸುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ’ ಎಂಬ ಆರೋಪದಡಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿ.ರಶ್ಮಿ ಮಹೇಶ್ ಸೇರಿದಂತೆ ನಾಲ್ವರು ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿಯ ಬೆಟ್ಟಗೇರಿ ಪೋಸ್ಟ್ ವ್ಯಾಪ್ತಿಯಲ್ಲಿರುವ ‘ಕನ್ನಡ ಮಠ’ದ ಪೀಠಾಧಿಪತಿ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಕೆ.ಎ.ಮಹೇಶ್ ಅವರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ವಿ.ರಶ್ಮಿ, ಮುಜರಾಯಿ ಇಲಾಖೆ ಆಯುಕ್ತ ಎಂ.ವಿ.ವೆಂಕಟೇಶ್, ಕೊಡಗಿನ ಜಿಲ್ಲಾಧಿಕಾರಿ ವೆಂಕಟರಾಜ ಮತ್ತು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ಎಚ್.ಎನ್.ರಾಮಚಂದ್ರ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.
ದೂರು ಏನು?
ಕನ್ನಡ ಮಠದ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನಗಳ ದೈನಂದಿನ ಪೂಜಾ ಕೈಂಕರ್ಯಗಳ ನಿರ್ವಹಣೆಗೆ ತಸ್ತೀಕ್ ಮೊತ್ತವನ್ನು ನೀಡುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ‘ಅರ್ಜಿದಾರರು 2022ರ ಅಕ್ಟೋಬರ್ 7ರಂದು ನೀಡಿರುವ ಮನವಿಯ ಬಗ್ಗೆ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿವಾದಿಗಳಾದ ಕಂದಾಯ, ಮುಜರಾಯಿ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶಿಸಿತ್ತು. ಅಂತೆಯೇ ಇದರ ವರದಿಯನ್ನು ಎಂಟು ವಾರಗಳ ಒಳಗಾಗಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಒಪ್ಪಿಸತಕ್ಕದ್ದು’ ಎಂದು ಸಂಬಂಧಿಸಿದ ಪ್ರತಿವಾದಿ ಅಧಿಕಾರಿಗಳಿಗೆ 2023ರ ಸೆಪ್ಟೆಂಬರ್ 25ರಂದು ಆದೇಶಿಸಿತ್ತು.
‘ಈ ಆದೇಶವನ್ನು ಪಾಲನೆ ಮಾಡುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಮತ್ತು ಈ ಸಂಬಂಧಿಸಿದ ಅಧಿಕಾರಿಗಳು ನ್ಯಾಯಾಂಗ ನಿಂದನೆ ಎಸಗಿದ್ದಾರೆ’ ಎಂದು ಅರ್ಜಿದಾರರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.