ವಿಜಯೇಂದ್ರ
(ಸಂಗ್ರಹ ಚಿತ್ರ)
ಬೆಂಗಳೂರು: ಮುಖ್ಯಮಂತ್ರಿಯವರು ಐಎಎಸ್ ಮತ್ತು ಇತರ ಅಧಿಕಾರಿಗಳ ವಿರುದ್ದ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್ ಅಧಿಕಾರಿಗಳ ಸಂಘ ಎಲ್ಲಿ ಹೋಗಿತ್ತು? ಆಗ ಏಕೆ ಮುಖ್ಯಮಂತ್ರಿ ವಿರುದ್ಧ ದೂರು ನೀಡಲಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ಹೇಳಿಕೆ ಕುರಿತು ಮಾಧ್ಯಮಗಳ ವರದಿ ಗಮನಿಸಿದ್ದೇನೆ. ರವಿಕುಮಾರ್ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ಐಎಎಸ್ ಅಧಿಕಾರಿಗಳ ಸಂಘದವರು ಮುಖ್ಯಮಂತ್ರಿ ಭೇಟಿ ಮಾಡಿ ದೂರು ನೀಡಿದ್ದಾಗಿ ಮಾಹಿತಿ ಬಂದಿದೆ. ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋಗಿದ್ದರಲ್ಲವೇ? ಆಗ ಈ ಐಎಎಸ್ ಸಂಘ ಎಲ್ಲಿ ಹೋಗಿತ್ತು? ಮತ್ತೊಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯನ್ನು ‘ಏಯ್ ಎದ್ದೇಳು’ ಎಂದು ಎಬ್ಬಿಸಿ ಕಳುಹಿಸಿ ಅಪಮಾನ ಮಾಡಿದ್ದರು. ಇಂತಹ ಹಲವು ಪ್ರಕರಣಗಳು ನಡೆದಿವೆ. ಆಗ ಐಎಎಸ್ ಸಂಘ ಎಲ್ಲಿ ಹೋಗಿತ್ತು? ಈ ವಿಷಯ ಕೂಡ ಚರ್ಚೆ ಆಗಲಿ, ಅದರ ಬಗ್ಗೆಯೂ ಸಂಘ ಮಾತನಾಡಲಿ. ಜನರು ಕೂಡ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಪೊಲೀಸ್ ಇಲಾಖೆಯಲ್ಲಿ ನಿಗದಿತ ದಿನದಂದು ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ನೀರಾವರಿ ಇಲಾಖೆಯಲ್ಲಿ 2–3 ತಿಂಗಳಿಂದ ಸರಿಯಾಗಿ ಸಂಬಳ ನೀಡುತ್ತಿಲ್ಲ. ಎಲ್ಲ ಇಲಾಖೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಇಂಥ ದರಿದ್ರ ಸರ್ಕಾರ ಬದುಕಿದೆಯೇ ಎಂದು ಜನ ಸಾಮಾನ್ಯರು ಮಾತನಾಡುತ್ತಿದ್ದಾರೆ. ಯಾರೇ ಮುಖ್ಯಮಂತ್ರಿ ಇದ್ದರೂ ಪರಿಸ್ಥಿತಿ ಬದಲಾಗದು ಎಂದು ವಿಜಯೇಂದ್ರ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಹಳ ಜನ ಪ್ರಾರ್ಥನೆ ಮಾಡುತ್ತಿದ್ದಾರೆ, ಪ್ರಯತ್ನ ಮಾಡುತ್ತಿದ್ದಾರೆ. ಸುರ್ಜೇವಾಲಾರನ್ನು ಕರೆಸಿ ಭೂಮಿ ಪೂಜೆ, ಗುದ್ದಲಿ ಪೂಜೆ ಮಾಡಿಸಲಿದ್ದಾರೆ. ಬರುವ ದಿನಗಳಲ್ಲಿ ಏನೇನಾಗುತ್ತದೆಯೋ ಕಾದು ನೋಡೋಣ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಯಾರು ಮುಖ್ಯಮಂತ್ರಿ ಎಂಬುದು ನಮಗೆ ಮುಖ್ಯವಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯ ಜನರು ಛೀಮಾರಿ ಹಾಕುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.